ವಿಜಯನಗರ | ಸದೃಢ ದೇಶ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದು : ಡಿ.ಪಿ.ಕುಮಾರಸ್ವಾಮಿ
ವಿಜಯನಗರ (ಹೊಸಪೇಟೆ): ಭಾರತವು ಸಂವಿಧಾನಬದ್ಧ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿದ್ದು, ಮತದಾನದ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಪಿ.ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜವಾಬ್ದಾರಿಯುತ ಪ್ರಜೆಗಳಾದ ಯುವಕರು ಮತ್ತು ವಿದ್ಯಾರ್ಥಿಗಳೇ ದೇಶದ ಭವಿಷ್ಯ ಎಂದು ಹೇಳಿದರು.
ಯುವಜನರು ಸಂವಿಧಾನ ಹಾಗೂ ದೇಶದ ಆಡಳಿತ ವ್ಯವಸ್ಥೆಯ ಕುರಿತು ಸಮಗ್ರ ಅರಿವು ಹೊಂದಿರಬೇಕು. ಚುನಾವಣೆಯಲ್ಲಿ ಹಣ, ಆಸೆ-ಆಮಿಷಗಳಿಗೆ ಒಳಗಾಗಿ ಮತ ಮಾರಿಕೊಳ್ಳುವುದು ಭ್ರಷ್ಟಾಚಾರಕ್ಕೆ ಸಮಾನವಾಗಿದ್ದು, ಇಂತಹ ನಡೆ ದೇಶದ ಪ್ರಗತಿಗೆ ಮಾರಕವಾಗಿದೆ ಎಂದು ಎಚ್ಚರಿಸಿದರು.
ಪ್ರತಿಯೊಬ್ಬ ನಾಗರಿಕನು ಸಂವಿಧಾನದ ಪ್ರಸ್ತಾವನೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ತಿಳಿದುಕೊಳ್ಳಬೇಕು. ಭ್ರಷ್ಟಾಚಾರ ಮುಕ್ತ ರಾಷ್ಟ್ರ ನಿರ್ಮಾಣ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕಾದರೆ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, 2011ರಿಂದ ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದ್ದು, ಈ ಬಾರಿ ‘ನನ್ನ ಭಾರತ, ನನ್ನ ಮತ’ ಎಂಬ ಘೋಷವಾಕ್ಯದಡಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ-ಯುವತಿಯು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ನೆರೆ ರಾಷ್ಟ್ರಗಳಿಗಿಂತ ಭಾರತದಲ್ಲಿ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದು, ಅದರ ರಕ್ಷಣೆಗೆ ಯುವ ಸಮೂಹ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ ಅವರು ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ಬೂತ್ ಮಟ್ಟದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಬಿಎಲ್‌ಒಗಳು ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹ್ಮದ್ ಅಲಿ ಅಕ್ರಮ್ ಷಾ, ಉಪವಿಭಾಗಾಧಿಕಾರಿ ವಿವೇಕಾನಂದ, ಪೌರಾಯುಕ್ತ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.