Vijayanagara | ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದೇ ಯುವಜನೋತ್ಸವದ ಉದ್ದೇಶ: ಪಿ.ಎನ್.ಲೋಕೇಶ್
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ
ವಿಜಯನಗರ (ಹೊಸಪೇಟೆ) : ಯುವಜನತೆಯಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರ ಜತೆಗೆ ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಜಿಲ್ಲಾ ಮಟ್ಟದಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದವರೆಗೆ ಸಾಧನೆ ಮಾಡಲು ಯುವ ಪ್ರತಿಭೆಗಳು ನಿರಂತರ ಪರಿಶ್ರಮ, ಶ್ರದ್ಧೆಯ ಅಭ್ಯಾಸ ಹಾಗೂ ಗೆಲ್ಲುವ ಛಲವನ್ನು ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದರು.
ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಓದು, ಬರಹ ಹಾಗೂ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದೆ. ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ, ಸಂವಹನ ಕೌಶಲ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತವೆ. ಇದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವದ ಸಮಗ್ರ ವಿಕಸನ ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮಗಳಲ್ಲಿ ಕೇವಲ ಭಾಗವಹಿಸುವುದಷ್ಟೇ ಅಲ್ಲದೆ, ಇತರರ ಪ್ರದರ್ಶನಗಳನ್ನು ಪ್ರೋತ್ಸಾಹಿಸುವ ಮನೋಭಾವ ಹಾಗೂ ಸಹಿಷ್ಣುತೆಯನ್ನೂ ಬೆಳೆಸಿಕೊಳ್ಳಬೇಕು. ಯುವಜನೋತ್ಸವವು ಯುವ ಪ್ರತಿಭೆಗಳಿಗೆ ತಮ್ಮ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಹಾಗೂ ಜಿಲ್ಲಾ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಲು ಅವಕಾಶ ಕಲ್ಪಿಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಯುವಜನೋತ್ಸವದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಶ್ವೇತಾ ಮತ್ತು ತಂಡ ಪ್ರಥಮ ಸ್ಥಾನ, ನೇತ್ರಾ ತಂಡ ದ್ವಿತೀಯ ಸ್ಥಾನ ಪಡೆದಿದೆ. ಜನಪದ ನೃತ್ಯ ಸ್ಪರ್ಧೆಯಲ್ಲಿ ರಂಗಸಖಿ ಕಲಾ ತಂಡ ಪ್ರಥಮ ಹಾಗೂ ಸರಸ್ವತಿ ತಂಡ ದ್ವಿತೀಯ ಸ್ಥಾನ ಗಳಿಸಿದೆ. ನುಕ್ಕಡ್ ನಾಟಕ ಸ್ಪರ್ಧೆಯಲ್ಲಿ ರಂಗಸಖಿ ಕಲಾ ತಂಡ ಪ್ರಥಮ ಸ್ಥಾನ, ಜಗದೀಶ್ ಮತ್ತು ತಂಡ ದ್ವಿತೀಯ ಸ್ಥಾನ ಪಡೆದಿದೆ.
ಕವಿತೆ ರಚನೆ ಸ್ಪರ್ಧೆಯಲ್ಲಿ ಎನ್. ಸಂತೋಷ್ ಪ್ರಥಮ ಹಾಗೂ ಕೆ. ಸನಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಚಿತ್ರಕಲೆ ಸ್ಪರ್ಧೆಯಲ್ಲಿ ವೀರೇಶ ಪ್ರಥಮ ಹಾಗೂ ಪೃಥ್ವಿರಾಜ್ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ತಳವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ತಳವಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಗೊಂಡಬಾಳ ಸ್ವಾಗತಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ವಾರ್ತಾಧಿಕಾರಿ ಡಾ. ಎಸ್.ಎಂ. ಹಿರೇಮಠ, ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.