ವಿಜಯನಗರ | ರಸ್ತೆ ನಿಯಮ ಪಾಲನೆ ದಂಡಕ್ಕಾಗಿ ಅಲ್ಲ, ಜೀವದ ರಕ್ಷಣೆಗಾಗಿ ಇರಲಿ : ನ್ಯಾ.ಡಿ.ಪಿ.ಕುಮಾರಸ್ವಾಮಿ
ವಿಜಯನಗರ (ಹೊಸಪೇಟೆ): ಜೀವವು ಅತ್ಯಂತ ಅಮೂಲ್ಯವಾದುದು. ರಸ್ತೆ ಸಂಚಾರಿ ನಿಯಮಗಳನ್ನು ಕೇವಲ ದಂಡಕ್ಕೆ ಹೆದರಿ ಪಾಲಿಸದೆ, ಸ್ವಯಂಪ್ರೇರಿತರಾಗಿ ಜೀವದ ರಕ್ಷಣೆಗಾಗಿ ಪಾಲಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪಿ. ಕುಮಾರಸ್ವಾಮಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ನಗರದ ವಡಕಾರಾಯ ದೇವಸ್ಥಾನದ ಬಳಿ ಭಾನುವಾರ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ '37ನೇ ರಸ್ತೆ ಸುರಕ್ಷತಾ ಸಪ್ತಾಹ'ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ರಸ್ತೆ ಅಪಘಾತಗಳು ಸಂಭವಿಸಿದಾಗ ಕೇವಲ ಒಬ್ಬ ವ್ಯಕ್ತಿಯಲ್ಲ, ಇಡೀ ಕುಟುಂಬವೇ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಸವಾರನು ತಮಗಾಗಿ ಅಲ್ಲದಿದ್ದರೂ, ತಮ್ಮನ್ನು ನಂಬಿರುವ ಕುಟುಂಬದವರಿಗಾಗಿ ಹೆಲ್ಮೆಟ್ ಧರಿಸುವ ಜವಾಬ್ದಾರಿ ತೋರಬೇಕು ಎಂದು ಅವರು ಕಿವಿಮಾತು ಹೇಳಿದರು.
ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ರ‍್ಯಾಲಿಯಲ್ಲಿ ಸಂಚಾರಿ ನಿಯಮಗಳ ಫಲಕಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆಯಲಾಯಿತು.
ಕಾರ್ಯಕ್ರಮದಲ್ಲಿ ಎಎಸ್ಪಿ ಮಂಜುನಾಥ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.