ನೀಟ್ ಅಕ್ರಮ ಖಂಡಿಸಿ, ಸೋನಂ ವಾಂಗ್ಚುಕ್ ಹೋರಾಟಕ್ಕೆ ಬೆಂಬಲಿಸಿ ಹೊಸಪೇಟೆಯಲ್ಲಿ ಮಹಿಳೆಯರಿಂದ ಮೌನ ಪ್ರತಿಭಟನೆ
ಹೊಸಪೇಟೆ/ವಿಜಯನಗರ: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಹೊಸಪೇಟೆಯಲ್ಲಿ ಮಹಿಳೆಯರು ಕಪ್ಪು ಉಡುಪು ಧರಿಸಿ ಮೌನ ಜಾಗೃತಿ ಕಾರ್ಯಕ್ರಮ ನಡೆಸಿ, ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಕುರಿತ ಆತಂಕವನ್ನು ವ್ಯಕ್ತಪಡಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ನಡೆದ ಶಾಂತಿಯುತ ಪ್ರತಿಭಟನೆಯಲ್ಲಿ ಮಹಿಳೆಯರು ಯಾವುದೇ ಘೋಷಣೆಗಳನ್ನು ಕೂಗದೆ ಮೌನವಾಗಿ ನಿಂತು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೂ ಮುನ್ನ ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿತ್ತು.
ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡರಾದ ದಿವ್ಯ, ಉಷಾರಾಣಿ ಹಾಗೂ ಸೌಭಾಗ್ಯ, ಸಾರ್ವಜನಿಕ ಪರೀಕ್ಷೆಗಳ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಗಂಭೀರ ಅಪಾಯವಾಗಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಮರುಸ್ಥಾಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಅವರು, ವಿದ್ಯಾರ್ಥಿ-ಯುವಜನರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ, ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳು ಹಾಗೂ ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಹಲವು ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದು, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತ ಮೌಲ್ಯಗಳ ರಕ್ಷಣೆಗಾಗಿ ತನ್ನ ಹೋರಾಟ ಮುಂದುವರಿಸಲಿದೆ ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ನೇತ್ರ, ನೂರಜಹಾನ್, ಹಸೀನಾ, ನಸ್ರೀನ್ ಮಿಠಾಯಿ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮಹಿಳಾ ಕಾರ್ಯಕರ್ತೆಯರು ಭಾಗವಹಿಸಿದ್ದರು.