ಉದ್ಯೋಗ ಸಂದರ್ಶನಕ್ಕೆ ತೆರಳುತ್ತಿದ್ದ ವಿಜಯಪುರ ಮೂಲದ ಇಬ್ಬರು ಯುವತಿಯರು ರಸ್ತೆ ಅಪಘಾತದಲ್ಲಿ ಮೃತ್ಯು
ವಿಜಯಪುರ/ತುಮಕೂರು: ಬಿ-ಫಾರ್ಮಾ ಪದವಿ ಪೂರ್ಣಗೊಳಿಸಿ ಉದ್ಯೋಗ ಸಂದರ್ಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿದ್ದ ವಿಜಯಪುರ ಮೂಲದ ಇಬ್ಬರು ಯುವತಿಯರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ದಾಬಸ್ ಪೇಟೆ ಸಮೀಪದ ಹುಲಿಕುಂಟೆ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ವಿಜಯಪುರ ಮೂಲದ ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ.
ಮೃತರು ವಿಜಯಪುರದಿಂದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮತ್ತೊಬ್ಬ ಯುವತಿ ಹಾಗೂ ಚಾಲಕ ಪವನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಎದುರಿನಿಂದ ಬಂದ ಟಾಟಾ ಕಾರಿನಲ್ಲಿದ್ದ ನಾಲ್ವರು ಸೇರಿದಂತೆ ಐದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬಿ-ಫಾರ್ಮಾ ಶಿಕ್ಷಣ ಪೂರ್ಣಗೊಳಿಸಿದ್ದ ಯುವತಿಯರು ಬೆಂಗಳೂರಿನಲ್ಲಿ ನಡೆಯಲಿದ್ದ ಉದ್ಯೋಗ ಸಂದರ್ಶನದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸೋಮವಾರ ಬೆಳಗಿನ ಜಾವ ಸುಮಾರು 5 ಗಂಟೆಗೆ ತಾವರೆಕೆರೆ ಬಳಿ ತಲುಪುತ್ತಿದ್ದಂತೆ ಚಾಲಕ ಪವನ್ ಅವರ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್ಗೆ ರಭಸವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ತೀವ್ರತೆಗೆ ಕಾರು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಟಾಟಾ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಶಿರಾ ಡಿವೈಎಸ್ಪಿ, ಶಿರಾ ಗ್ರಾಮಾಂತರ ಸಿಪಿಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.