Vijayapura | ಇಂಡಿ ತಾಲ್ಲೂಕಿನ ಹೊರ್ತಿ ಸೇರಿದಂತೆ ಬರಪೀಡಿತ ಹಲವು ಗ್ರಾಮಗಳಿಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ
"ಸಚಿವ ಸಂಪುಟದಲ್ಲಿ ಚರ್ಚಿಸಿ ಪರಿಹಾರಕ್ಕೆ ಕ್ರಮ"
ವಿಜಯಪುರ : ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮ ಸೇರಿದಂತೆ ಹಲವು ಹಳ್ಳಿಗಳಲ್ಲಿನ ಬರಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಇಂದು ಖುದ್ದು ವೀಕ್ಷಿಸಿ, ರೈತರಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಕೈ ಕೊಟ್ಟ ಮುಂಗಾರು ಮಳೆಯಿಂದಾಗಿ ತೊಗರಿ, ಈರುಳ್ಳಿ, ಸೂರ್ಯಕಾಂತಿ, ಹತ್ತಿ ಸೇರಿದಂತೆ ಹಲವು ಬೆಳೆಗಳು ಕೈಕೊಟ್ಟಿದ್ದು, ಸಜ್ಜೆಯೂ ಬೆಳೆಯದಷ್ಟು ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ.ರೈತರ ನೋವು, ನಷ್ಟ ಹಾಗೂ ಅಸಹಾಯಕತೆಯನ್ನು ನೇರವಾಗಿ ಆಲಿಸಿದಾಗ ಮನಸ್ಸಿಗೆ ನೋವಾಯಿತು ಎಂದು ಅವರು ಹೇಳಿದ್ದಾರೆ.
ಈ ಸಂಕಷ್ಟವನ್ನು ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದು, ಸಚಿವ ಸಂಪುಟದಲ್ಲಿ ಚರ್ಚಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿ ರೈತರ ಹಿತದೃಷ್ಟಿಯಿಂದ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದರು.
ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಸುಮಾರು 2.5 ಲಕ್ಷ ರೈತರು ಬೆಳೆ ವಿಮೆ ಮಾಡಿಸಿರುವುದು ಆಶಾದಾಯಕ ಬೆಳವಣಿಗೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಬೆಳೆ ವಿಮೆ ರೈತರಿಗೆ ಹೆಚ್ಚಿನ ನೆರವು ನೀಡಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ರೈತರು ಬೆಳೆ ವಿಮೆಯ ವ್ಯಾಪ್ತಿಗೆ ಬರಬೇಕು. ಕೇಂದ್ರ ಸರ್ಕಾರದ ಗಮನಕ್ಕೂ ಈ ಗಂಭೀರ ಬರ ಪರಿಸ್ಥಿತಿಯನ್ನು ತಂದು, ಅಲ್ಲಿಂದಲೂ ಅಗತ್ಯ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರೈತರ ಬೆವರಿನಿಂದ ನಾಡಿನ ಅನ್ನದ ಬಟ್ಟಲು ತುಂಬುತ್ತದೆ; ಅವರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಸಚಿವರು ಅಭಿಪ್ರಾಯ ಪಟ್ಟರು
ಜಿಲ್ಲಾಧಿಕಾರಿಗಳಾದಆನಂದ್ ಕೆ, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ರಿಷಿ ಆನಂದ್, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಇಂದಿನ ಉಪಸ್ಥಿತರಿದ್ದರು.