×
Ad

ವಿಜಯಪುರ| 77 ನೇ ಗಣರಾಜ್ಯೋತ್ಸವ: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ

Update: 2026-01-26 10:42 IST

ವಿಜಯಪುರ: ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭ ಸೋಮವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭವ್ಯವಾಗಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

 ಕಾರ್ಯಕ್ರಮದಲ್ಲಿ ನಿಶಿತಾ ಗುಪ್ತಾ ಐಪಿಎಸ್ ಪ್ರೊಬೇಷನರಿ ಅಧಿಕಾರಿ ನೇತೃತ್ವದಲ್ಲಿ ಪೊಲೀಸ್, ಗೃಹ ರಕ್ಷಕ ದಳ, ಎನ್‌.ಸಿ.ಸಿ, ಎನ್‌.ಎಸ್.ಎಸ್, ಸ್ಕೌಟ್ ಮತ್ತು ಗೈಡ್ಸ್, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಚಿವ ಡಾ. ಎಂ.ಬಿ.ಪಾಟೀಲ ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪಥಸಂಚಲನವನ್ನು ವೀಕ್ಷಿಸಿದರು.

ನಂತರ ಸಾರ್ವಜನಿಕರಿಗೆ ಗಣರಾಜ್ಯೋತ್ಸವ ಸಂದೇಶ ನೀಡಿದ ಸಚಿವ ಎಂ.ಬಿ.ಪಾಟೀಲ ಅವರು, "ಪ್ರಜಾಪ್ರಭುತ್ವ ಒಂದು ಜೀವನ ವಿಧಾನವಾಗಿದೆ. ಇದು ಆರ್ಥಿಕ, ಸಾಮಾಜಿಕ, ಸಮಾನತೆಯ ಹಾಗೂ ರಾಜಕೀಯ ಸ್ವಾತಂತ್ರ್ಯ ಒದಗಿಸಲು ಹೋರಾಡುತ್ತದೆ. ಪ್ರಜಾಪ್ರಭುತ್ವ ಜೀವಂತವಾಗಿರಬೇಕಾದರೆ ಪ್ರತಿಯೊಬ್ಬರಲ್ಲಿ ಪರಸ್ಪರ ತಿಳುವಳಿಕೆ, ವಿಚಾರ ವಿನಿಮಯ, ಸಹಕಾರ, ಸಹಾನುಭೂತಿ ಮತ್ತು ರಚನಾತ್ಮಕ ವಿಮರ್ಶೆ ಅತ್ಯಂತ ಅಗತ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯೊಳಗೆ ನೈತಿಕತೆ, ಮಾನವೀಯತೆ ಮತ್ತು ಸಮಾಜವನ್ನು ಕಟ್ಟುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವುದು ನಮ್ಮ ಕರ್ತವ್ಯ" ಎಂದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳೊಂದಿಗೆ ಆಕರ್ಷಕ ನೃತ್ಯ ಪ್ರದರ್ಶನ ನಡೆಸಿದರು.

ಈ ಸಂದರ್ಭದಲ್ಲಿ ನಗರದ ಶಾಸಕರು ಬಸನಗೌಡ ಪಾಟೀಲ ಯತ್ನಾಳ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಮಹಾನಗರ ಪಾಲಿಕೆಯ ಮೇಯರ್ ಎಂ.ಎಸ್.ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಪ್, ಜಿಲ್ಲಾಧಿಕಾರಿ ಡಾ. ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಸಿಇಒ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಮತ್ತು ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News