ವಿಜಯಪುರ: ನಗರದ ಸಾರ್ವಜನಿಕ ರಸ್ತೆಗಳು ಹಾಗೂ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿ ನಿರ್ಮಿಸಲಾಗಿದೆ ಎನ್ನಲಾದ 79 ಕಟ್ಟಡಗಳ ಅನಧಿಕೃತ ಭಾಗಗಳನ್ನು ಮಹಾನಗರ ಪಾಲಿಕೆ ವತಿಯಿಂದ ಎರಡು ದಿನಗಳ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿದೆ.

ಸೋಮವಾರದಿಂದ ಎರಡು ದಿನ ನಗರದ ವಾರ್ಡ್ ಸಂಖ್ಯೆ 27, 28 ಹಾಗೂ 30ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಖಾದಿ ಗ್ರಾಮೋದ್ಯೋಗದಿಂದ ಅಲಿಖಾ ರೋಜಾ ಸ್ಮಾರಕದವರೆಗಿನ ರಸ್ತೆ, ಅಥಣಿ ಗಲ್ಲಿ, ಸಕಾಫ್ ರೋಜಾ ಹಾಗೂ ಖಾಸಗೇರಿ ಓಣಿಗಳಲ್ಲಿ ಸಾರ್ವಜನಿಕ ರಸ್ತೆ ಮತ್ತು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ನಿರ್ಮಿಸಲಾಗಿದೆ ಎನ್ನಲಾದ ಕಟ್ಟಡಗಳ ಅನಧಿಕೃತ ಭಾಗಗಳನ್ನು ತೆರವುಗೊಳಿಸಲಾಗಿದೆ.

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆಗೆ 150 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ನಗರದ ವಿವಿಧ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿರುವ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತಿದೆ.

ಅತಿಕ್ರಮಣದಾರರಿಗೆ ಸ್ವಯಂಪ್ರೇರಿತವಾಗಿ ಅನಧಿಕೃತ ಭಾಗಗಳನ್ನು ತೆರವುಗೊಳಿಸಿಕೊಳ್ಳುವಂತೆ ಪಾಲಿಕೆಯಿಂದ ನೋಟಿಸ್ ನೀಡಲಾಗಿತ್ತು. ಆದರೂ ತೆರವುಗೊಳಿಸದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ನ.23ರಂದು 26 ಹಾಗೂ ನ.24ರಂದು 53 ಕಟ್ಟಡಗಳ ಅನಧಿಕೃತ ಭಾಗಗಳನ್ನು ತೆರವುಗೊಳಿಸಲಾಗಿದೆ ಎಂದು ಎಂದು ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲಿಕೆಯ ಅಧೀಕ್ಷಕ ಅಭಿಯಂತರ ಇ. ತಿಮ್ಮಪ್ಪ, ವಲಯ ಆಯುಕ್ತ ಮೋಹನ ಜಾಧವ, ಎಚ್.ಎಸ್. ಚಿತ್ತರಗಿ, ಕಾರ್ಯಪಾಲಕ ಅಭಿಯಂತರರಾದ ವಿಠಲ ಹೊನ್ನಳ್ಳಿ, ಪರಿಮಳಾ ಚಿಮ್ಮಲಗಿ ಸೇರಿದಂತೆ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor