Vijayapura | ಚಡಚಣದಲ್ಲಿ ಆರು ಮಂದಿಯ ಭೀಕರ ಕೊಲೆ ಪ್ರಕರಣ; 12 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ | PC : Gemini AI
ವಿಜಯಪುರ : ತೀವ್ರ ಸಂಚಲನ ಮೂಡಿಸಿರುವ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದ 6 ಮಂದಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿದ್ದು, ಇದುವರೆಗೆ ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ಬಿ.ನಿಂಬರಗಿ ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ವಿವಿಧೆಡೆ ದಾಳಿ ನಡೆಸಿ ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರನ್ನೂ ಇಂದು ಇಂಡಿ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗೋವಿಂದಪುರದಲ್ಲಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಎಸ್ಪಿಯವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ನೆರೆ ರಾಜ್ಯಗಳು ಹಾಗೂ ಜಿಲ್ಲೆಯ ವಿವಿಧೆಡೆ ಜಾಲ ಬೀಸಿದ್ದ ಪೊಲೀಸರು, ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
"ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೊಲೆಗೆ ನಿಖರ ಕಾರಣ ಹಾಗೂ ಇದರಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ತಿಳಿಸಿದ್ದಾರೆ.