×
Ad

ವಿಶೇಷ ಸ್ಥಾನಮಾನದ ಬಳಿಕ ಕಲ್ಯಾಣ ಕರ್ನಾಟಕಕ್ಕೆ 19,778.33 ಕೋಟಿ ರೂ.ಹಂಚಿಕೆ : ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

Update: 2025-12-20 11:24 IST

ಮಲ್ಲಿಕಾರ್ಜುನ ಖರ್ಗೆ ಧರಂ ಸಿಂಗ್ ಪ್ರಯತ್ನದಿಂದಾಗಿ ಕಲಂ 371 ಕ್ಕೆ ತಿದ್ದುಪಡಿ

ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತರಬೇಕು ಎಂದು ಹಲವು ದಶಕಗಳಿಂದ ಹೋರಾಟ ನಡೆದಿತ್ತು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರ ಆ ಪ್ರಸ್ತಾವವನ್ನು ತಿರಸ್ಕರಿಸಿತ್ತು. ಆದರೆ, ರಾಜ್ಯಸಭೆಯ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ಎನ್. ಧರಂಸಿಂಗ್ ಅವರ ಅವಿರತ ಪ್ರಯತ್ನದಿಂದಾಗಿ ಕಲಂ 371ಕ್ಕೆ ತಿದ್ದುಪಡಿಯಾಯಿತು. ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರ 2012ರ ಡಿಸೆಂಬರ್ ನಲ್ಲಿ ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದು 371 (ಜೆ) ಪರಿಚ್ಛೇದ ಸೇರ್ಪಡೆ ಮಾಡಿತು. ರಾಷ್ಟ್ರಪತಿಯ ಅಂಕಿತದೊಂದಿಗೆ 2013ರ ಜ.1ರಿಂದ ಜಾರಿಗೆ ಬಂದಿತು.

ಪ್ರಿಯಾಂಕ್ ಖರ್ಗೆ, 

-ಜಿಲ್ಲಾ ಉಸ್ತುವಾರಿ ಸಚಿವ, ಕಲಬುರಗಿ

ಸಂದರ್ಶನ: ಅಮ್ಜದ್ ಖಾನ್ ಎಂ.

ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಲಭ್ಯವಾಗಿ ಒಂದು ದಶಕ ಕಳೆದಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆಗಿರುವ ಅಭಿವೃದ್ಧಿ, ಜನಸಾಮಾನ್ಯರ ಜೀವನದಲ್ಲಿ ಆಗಿರುವ ಬದಲಾವಣೆ, ಉದ್ಯೋಗ ಸೃಷ್ಟಿ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡಿರುವ ಪ್ರಗತಿಯ ಕುರಿತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ‘ವಾರ್ತಾಭಾರತಿ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

►371(ಜೆ) ಕಲಂ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಲಭ್ಯವಾದ ಬಳಿಕ ಈ ಭಾಗದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಯಾವುವು?

ಪ್ರಿಯಾಂಕ್ ಖರ್ಗೆ: ಕಲ್ಯಾಣ ಕರ್ನಾಟಕ ಪ್ರಾಂತ್ಯಕ್ಕೆ ಸಂವಿಧಾನದ ಕಲಂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಲಭಿಸಿದ ಬಳಿಕ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಗೆ 2013-14ರಿಂದ 2024-25ನೇ ಸಾಲಿನವರೆಗೆ ರಾಜ್ಯ ಸರಕಾರವು 19,778.33 ಕೋಟಿ ರೂ. ಹಂಚಿಕೆ ಮಾಡಿ 16,228.80 ಕೋಟಿ ರೂ. ಬಿಡುಗಡೆ ಮಾಡಿದೆ. ಇದರಲ್ಲಿ 13,893.32 ಕೋಟಿ ರೂ. ವೆಚ್ಚ ಮಾಡಲಾಗಿದೆ. ಒಟ್ಟಾರೆ 41,103 ಕಾಮಗಾರಿಗಳು ಕೈಗೆತ್ತಿಕೊಂಡಿದ್ದು, 32,985 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 6,507 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. 2025-26ನೇ ಸಾಲಿನಲ್ಲಿ ಮಂಡಳಿಗೆ 5 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಕ್ರಿಯಾ ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಕೆಲಸಗಳು ಆರಂಭಗೊಂಡಿವೆ.

► ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೈಗೊಂಡಿರುವ ಕ್ರಮಗಳೇನು?

ಪ್ರಿಯಾಂಕ್ ಖರ್ಗೆ: 371(ಜೆ) ಅನುಷ್ಠಾನಗೊಂಡ ಬಳಿಕ ಇದುವರೆಗೆ ವಿವಿಧ ಇಲಾಖೆಗಳಲ್ಲಿ ಈ ಭಾಗದವರಿಗೆ 1,32,555 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಿದ್ದು, ಇದರಲ್ಲಿ 91,931 ಹುದ್ದೆ ಭರ್ತಿ ಮಾಡಲಾಗಿದೆ. 7,713 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿವೆ. ಅದೇ ರೀತಿ ಮುಂಭಡ್ತಿ ಮೀಸಲಿಗೆ ಗುರುತಿಸಿದ 45,227 ಹುದ್ದೆಗಳ ಪೈಕಿ 28,384 ಜನರಿಗೆ ಮುಂಭಡ್ತಿ ನೀಡಲಾಗಿದೆ. 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅಲ್ಲದೆ ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

► ಉನ್ನತ ಶಿಕ್ಷಣ ಪಡೆಯಲು ಬಯಸುವ ಈ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಸೌಲಭ್ಯಗಳೇನು?

ಪ್ರಿಯಾಂಕ್ ಖರ್ಗೆ: ಉನ್ನತ ಶಿಕ್ಷಣ, ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇತರ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಇತರ ಭಾಗಗಳಲ್ಲಿ ಶೇ.8ರಷ್ಟು ಸ್ಥಾನಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15ರಿಂದ 2024-25ನೇ ಶೈಕ್ಷಣಿಕ ಸಾಲಿನವರೆಗೆ ಪ್ರಮುಖವಾಗಿ ವೈದ್ಯಕೀಯ 9,943, ದಂತ ವೈದ್ಯಕೀಯ 2,109, ಇಂಜಿನಿಯರಿಂಗ್ 29,839, ಕೃಷಿ ಸಂಬಂಧಿತ 4,510, ಆಯುಷ್-ಹೋಮಿಯೋಪತಿ 3,448, ಬಿ-ಫಾರ್ಮಾ 1,719, ಪಶುವೈದ್ಯಕೀಯ ವಿಜ್ಞಾನ 38 ಸೇರಿ ಒಟ್ಟಾರೆ 51,606 ಅಭ್ಯರ್ಥಿಗಳು ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆದುಕೊಂಡಿದ್ದಾರೆ.

ಉನ್ನತ ಶಿಕ್ಷಣದಲ್ಲಿ ಉದ್ಯೋಗಾವಕಾಶವನ್ನು ಹೆಚ್ಚಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆಯು ಶಿಷ್ಯತ್ವ ಸಂಯೋಜಿತ ಪದವಿ ಕಾರ್ಯಕ್ರಮ ಆರಂಭಿಸಿದೆ. ಕಲ್ಯಾಣ ಕರ್ನಾಟಕಕ್ಕೆ 8 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಆಯ್ಕೆಯಾಗಿವೆ. ‘ಕಲಿಕೆ ಜೊತೆ ಕೌಶಲ್ಯ 2.0’ ಕಾರ್ಯಕ್ರಮದಡಿ 2023-24ರಿಂದ ಇಲ್ಲಿಯವರೆಗೆ ಪ್ರದೇಶದ 78 ಕಾಲೇಜುಗಳಲ್ಲಿ ಪದವಿ ಹಾಗೂ ಇತರ ಸ್ನಾತಕ ಪದವಿಯ 6ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ 19,526 ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಕೆಕೆಆರ್‌ಡಿಬಿ ಮಂಡಳಿ ವತಿಯಿಂದ 5.07 ಕೋಟಿ ರೂ. ವೆಚ್ಚ ಮಾಡಲಾಗಿದೆ.

► ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಯಾವ ಕಾಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ?

ಪ್ರಿಯಾಂಕ್ ಖರ್ಗೆ: ಕಲ್ಯಾಣ ಕರ್ನಾಟಕ ಭಾಗದಲ್ಲಿ ‘ಅಕ್ಷರ ಆವಿಷ್ಕಾರ’ ಯೋಜನೆಯಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23 ಸಾವಿರ ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಇದರಿಂದ ಪ್ರದೇಶದ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪಿಯುಸಿ ಫಲಿತಾಂಶ ಸುಧಾರಣೆಯ ಆಶಾಭಾವನೆ ಹೊಂದಲಾಗಿದೆ.

ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದು ವಸತಿ ಶಾಲೆ ನಿರ್ಮಾಣ ಮಾಡಲು ಜಮೀನು ಗುರುತಿಸಲಾಗಿದೆ. ಅಲೆಮಾರಿ-ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊಪ್ಪಳ ಜಿಲ್ಲೆಯಲ್ಲಿ ಡಿ.ದೇವರಾಜ ಅರಸು ವಸತಿ ಶಾಲೆ ಸ್ಥಾಪಿಸಲಾಗುವುದು. ಸೇಡಂನಲ್ಲಿರುವ ಸರಕಾರಿ ಐಟಿಐ ಸಂಸ್ಥೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಬದಲಾವಣೆ ಮಾಡಲಾಗುವುದು.

► ಕಲ್ಯಾಣ ಪಥ ಸೇರಿದಂತೆ ರಸ್ತೆಗಳ ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳು ಯಾವ ಹಂತದಲ್ಲಿವೆ?

ಪ್ರಿಯಾಂಕ್ ಖರ್ಗೆ: ಕಲ್ಯಾಣ ಕರ್ನಾಟಕ ಭಾಗದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಘೋಷಿಸಲಾದ ‘ಕಲ್ಯಾಣಪಥ’ ಯೋಜನೆಯಡಿ 1,000 ಕೋಟಿ ರೂ. ಮೊತ್ತದ 286 ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. 1,696 ಕೋಟಿ ರೂ. ಮೊತ್ತದ ರಾಯಚೂರು-ಸಿಂಧನೂರು ರಸ್ತೆ ಅಭಿವೃದ್ಧಿ ಕಾಮಗಾರಿಯಡಿ ಇದುವರೆಗೆ 20 ಕಿ.ಮೀ. ಉದ್ದದ ರಸ್ತೆ ನಿರ್ಮಿಸಿದ್ದು, ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿದ ರಸ್ತೆಯನ್ನು ಪೂರ್ಣಗೊಳಿಸಲಾಗುವುದು.

ರಾಯಚೂರು ನಗರಕ್ಕೆ ಕೆಕೆಆರ್‌ಡಿಬಿ ಮ್ಯಾಕ್ರೋ ಅನುದಾನದಡಿ ವರ್ತುಲ ರಸ್ತೆಗಳನ್ನು ನಿರ್ಮಿಸಲು ವಿಸ್ಕೃತ ಯೋಜನಾ ವರದಿಗಳನ್ನು ತಯಾರಿಸಲಾಗುವುದು. ವಾಗ್ದಾರಿ-ರಿಬ್ಬನ್ ಪಳ್ಳಿ ರಸ್ತೆಯನ್ನು ಅಭಿವೃದ್ಧಿಪಡಿಸಲು ವಿಸ್ತೃತ ಯೋಜನಾ ವರದಿಗಳನ್ನು ತಯಾರಿಸಲಾಗುವುದು. ಕೆಶಿಪ್-4 ಯೋಜನೆಯಡಿ ಕಲಬುರಗಿ ಜಿಲ್ಲೆಯ ಚಡಚಣ-ಗಾಣಗಾಪೂರ 115 ಕಿ.ಮೀ. ಮತ್ತು ಕೊಪ್ಪಳ ಜಿಲ್ಲೆಯ ಗಿಣಿಗೇರ-ಮುಂಡರಗಿ 41 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ರಾಜ್ಯ ಸರಕಾರವು ರೈಲ್ವೆಯೊಂದಿಗೆ 50:50ರ ಅನುಪಾತದಲ್ಲಿ ಒಂಭತ್ತು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ವಾಡಿ-ಗದಗ ಮಾರ್ಗ ಸೇರಿದಂತೆ ಒಂಭತ್ತು ಯೋಜನೆಗಳಿಗೆ 600 ಕೋಟಿ ರೂ. ಒದಗಿಸಲಾಗಿದೆ.

► ‘ಬಿಯಾಂಡ್ ಬೆಂಗಳೂರು’ ಉಪಕ್ರಮದಡಿ ಈ ಭಾಗದಲ್ಲಿ ಕೈಗೊಂಡಿರುವ ಕ್ರಮಗಳೇನು?

ಪ್ರಿಯಾಂಕ್ ಖರ್ಗೆ: ಕಲಬುರಗಿಯಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ಸ್ಥಾಪಿಸಲಾಗುತ್ತಿದೆ. ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ 390.26 ಕೋಟಿ ರೂ. ಒದಗಿಸಲಾಗಿದೆ. ಜವಳಿ ಪಾರ್ಕ್ ಸ್ಥಾಪನೆಯಿಂದ 1 ಲಕ್ಷ ಜನರಿಗೆ ನೇರ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ದೊರಕುವ ನಿರೀಕ್ಷೆಯಿದೆ.

ಬೆಂಗಳೂರು ಹೊರತುಪಡಿಸಿ (ಬಿಯಾಂಡ್ ಬೆಂಗಳೂರು) ಇತರ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, ಸಾವಿರ ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮದಡಿ ಕಲಬುರಗಿಯಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಕಲಬುರಗಿಯಲ್ಲಿ ‘ಪ್ಲಗ್ ಆಂಡ್ ಪ್ಲೇ: ಫ್ಲಾಟ್ ಫ್ಯಾಕ್ಟರಿ’ಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

► ಆರೋಗ್ಯ ಹಬ್ ಆಗಿ ಕಲಬುರಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸಲು ನೀವು ಹಮ್ಮಿಕೊಂಡಿರುವ ಯೋಜನೆಗಳು ಯಾವುವು?

ಪ್ರಿಯಾಂಕ್ ಖರ್ಗೆ: ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ತಾಂತ್ರಿಕ ನೆರವಿನೊಂದಿಗೆ ಕಲಬುರಗಿಯಲ್ಲಿ 221.52 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಯ ಮಕ್ಕಳ ಆರೋಗ್ಯ ಘಟಕ ಸ್ಥಾಪಿಸಲಾಗುತ್ತಿದೆ. ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ 90 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮತ್ತು 72 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆಯ ವಿಸ್ತೀರ್ಣ ಕಟ್ಟಡ ನಿರ್ಮಿಸಲಾಗುತ್ತಿದೆ.

ಇತ್ತೀಚೆಗೆ 162.80 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮಾಡಲಾಗಿದೆ. 30.14 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕ ಮತ್ತು 15.57 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆ ಸಾಮರ್ಥ್ಯದ ಸುಟ್ಟ ಗಾಯಗಳ ಚಿಕಿತ್ಸಾ ಘಟಕ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ. ಕಲಬುರಗಿ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪಿಸಲಾಗುವುದು. ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

► ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ ಹಾಗೂ ಹೈನುಗಾರಿಕೆ ಉತ್ತೇಜಿಸಲು ಕೈಗೊಂಡಿರುವ ಕ್ರಮಗಳೇನು?

ಪ್ರಿಯಾಂಕ್ ಖರ್ಗೆ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡಲಾಗುವುದು. ಕಲಬುರಗಿಯಲ್ಲಿ ಕೆಕೆಆರ್‌ಡಿಬಿ ನೆರವಿನಿಂದ 50 ಕೋಟಿ ರೂ. ವೆಚ್ಚದಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲಾಗುವುದು. ಕೊಪ್ಪಳ ಜಿಲ್ಲೆಯ ಬೂದು ಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲ ಸೌಲಭ್ಯಗಳೊಂದಿಗೆ ಸ್ಥಾಪಿಸಲಾಗುವುದು. ಅಲ್ಲದೆ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.

2025-26ನೇ ಸಾಲಿಗೆ ಪ್ರದೇಶದ 7 ಜಿಲ್ಲೆಗಳಲ್ಲಿ ಸುಮಾರು 14,190 ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಲು 129.82 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಕಲಬುರಗಿ ವಿಭಾಗದಲ್ಲಿ ರೇಶ್ಮೆ ಬೆಳೆಗಾರರ ಅನುಕೂಲಕ್ಕಾಗಿ 15 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರಕಾರಿ ರೇಶ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಅಲ್ಲದೆ ಅಗ್ರಿಟೆಕ್ ವೇಗವರ್ಧಕ ಸ್ಥಾಪಿಸಲು ಉದ್ದೇಶಿಸಲಾಗಿದೆ.

► ಅಭಿವೃದ್ಧಿ ವಿಚಾರದಲ್ಲಿ ಪ್ರಾದೇಶಿಕ ಅಸಮತೋಲನಾ ನಿವಾರಿಸಲು ಸರಕಾರ ಕೈಗೊಂಡಿರುವ ಕ್ರಮಗಳೇನು?

ಪ್ರಿಯಾಂಕ್ ಖರ್ಗೆ: ರಾಜ್ಯದ ಅಭಿವೃದ್ಧಿ ಹಾಗೂ ಪ್ರಾದೇಶಿಕ ಅಸಮತೋಲನ ಬಗ್ಗೆ ಅಧ್ಯಯನ ನಡೆಸಲು ಆರ್ಥಿಕ ತಜ್ಞ ಪ್ರೊ.ಎಂ.ಗೋವಿಂದ ರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿಯನ್ನು ರಾಜ್ಯ ಸರಕಾರ ರಚಿಸಿದೆ. ಆ ಸಮಿತಿಯು ನೀಡುವ ವರದಿ ಹಾಗೂ ಶಿಫಾರಸುಗಳ ಅನ್ವಯ ಸರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ. ಸಂವಿಧಾನದ ಕಲಂ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ನೀಡಲಾದ ವಿಶೇಷ ಸ್ಥಾನಮಾನದ ಅನುಷ್ಠಾನಕ್ಕಾಗಿ ಹೊರಡಿಸಲಾದ ಆದೇಶಗಳ ಜಾರಿಯ ಮೇಲ್ವಿಚಾರಣೆಗಾಗಿ ನನ್ನ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಂದರ್ಶನ: ಅಮ್ಜದ್ ಖಾನ್ ಎಂ.

contributor

Similar News