ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣ ನಡೆದು ನ.12ಕ್ಕೆ ಮೂರು ವರ್ಷಗಳು ಪೂರ್ಣಗೊಂಡಿವೆ. 2023ರ ನ.12ರಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೃಪ್ತಿ ಲೇಔಟ್ ನಲ್ಲಿ ಹಗಲಿನಲ್ಲೇ ನಡೆದಿದ್ದ ಈ ಹತ್ಯಾಕಾಂಡದ ನೆನಪು ಇಂದಿಗೂ ಜನಮಾನಸದಿಂದ ಮಾಸಿಲ್ಲ. ಒಂದೇ ಕುಟುಂಬದ ನಾಲ್ವರನ್ನು ಕಳೆದುಕೊಂಡ ಕುಟುಂಬ ನ್ಯಾಯಕ್ಕಾಗಿ ಕಾಯುತ್ತಿದೆ.

ಪ್ರಕರಣ ಸದ್ಯ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈಗಾಗಲೇ 81 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಮುಂದಿನ ವಿಚಾರಣೆಯನ್ನು ಡಿ.3ಕ್ಕೆ ನಿಗದಿಪಡಿಸಲಾಗಿದೆ. ವಿಚಾರಣೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬುದು ಮೃತರ ಕುಟುಂಬದ ಆಗ್ರಹ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಯಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ನೇಜಾರಿನ ನೂರ್ ಮುಹಮ್ಮದ್ ಅವರ ಪುತ್ರಿ ಐನಾಝ್ ಮೇಲಿನ ಅತಿಯಾದ ವ್ಯಾಮೋಹದಿಂದ ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್ ಪ್ರದೀಪ್ ಚೌಗುಲೆ ಹತ್ಯೆಗೆ ಸಂಚು ರೂಪಿಸಿದ್ದನು.

ಯಾವುದೇ ಸುಳಿವು ಸಿಗದಂತೆ ತನ್ನ ಕಾರನ್ನು ಹೆಜಮಾಡಿ ಟೋಲ್ ಗಿಂತ ಮೊದಲೇ ನಿಲ್ಲಿಸಿದ್ದ ಆತ, ಅಲ್ಲಿಂದ ಆಟೊ, ಬಸ್ ಮತ್ತು ಬೈಕ್ಗಳ ಮೂಲಕ ನೇಜಾರು ತಲುಪಿದ್ದನು. ನ.12ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಐನಾಝ್ ಮನೆಗೆ ಪ್ರವೇಶಿಸಿದ ಪ್ರವೀಣ್, ಆಕೆಯನ್ನು ಹಾಗೂ ತಡೆಯಲು ಬಂದ ಆಕೆಯ ತಾಯಿ ಹಸೀನಾ (48), ಅಕ್ಕ ಅಫ್ನಾನ್ (23) ಮತ್ತು ತಮ್ಮ ಆಸೀಮ್ (13) ಅವರನ್ನು ಚೂರಿಯಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದನು.

ಮನೆಯಲ್ಲಿದ್ದ ಹಸೀನಾರ ಅತ್ತೆ ಹಾಜಿರಾ (80) ಚೂರಿ ಇರಿತಕ್ಕೆ ಒಳಗಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನೆಗೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ನ.14ರಂದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಿದ್ದರು.

► 2,202 ಪುಟಗಳ ದೋಷಾರೋಪಣಾ ಪಟ್ಟಿ

ಪ್ರಕರಣದ ತನಿಖೆ ನಡೆಸಿದ ಪೊಲೀಸರು 2024ರ ಫೆ.12ರಂದು ಮೊದಲ ಹಂತದ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಬಳಿಕ ಎರಡನೇ ಹಂತದ ದೋಷಾರೋಪಣಾ ಪಟ್ಟಿಯನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಟ್ಟು 15 ಸಂಪುಟಗಳಲ್ಲಿ 2,202 ಪುಟಗಳ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, 244 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು.

ಸದ್ಯ ಸಾಕ್ಷಿಗಳ ವಿಚಾರಣೆ ಮುಂದುವರಿದಿದ್ದು, ಈಗಾಗಲೇ 81 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಮುಂದಿನ ವಿಚಾರಣೆಗೆ ಡಿ.3ರಂದು ದಿನಾಂಕ ನಿಗದಿಯಾಗಿದೆ. ಮೂರು ವರ್ಷಗಳ ಹಿಂದೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಈ ಪ್ರಕರಣದಲ್ಲಿ ನ್ಯಾಯಾಲಯದ ಅಂತಿಮ ತೀರ್ಪಿಗಾಗಿ ಸಂತ್ರಸ್ತ ಕುಟುಂಬ ಕಾಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor