ಸೆ.7ರಂದು ಯಾದಗಿರಿ ಬಂದ್‌ಗೆ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ
ಯಾದಗಿರಿ: ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ, ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಸೆ.7ರಂದು ಯಾದಗಿರಿ ಜಿಲ್ಲಾ ಕೇಂದ್ರ ಬಂದ್‌ಗೆ ಕರೆ ನೀಡಲಾಗಿದೆ.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಎಂ. ಜಲ್ಲಪ್ಪನೋರ್ ಮಾತನಾಡಿ, ರಾಜ್ಯದ ಹಲವು ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಸರ್ಕಾರ, ಅತ್ಯಂತ ಹಿಂದುಳಿದ ಹಾಗೂ ಬರದ ಪರಿಸ್ಥಿತಿ ಎದುರಿಸುತ್ತಿರುವ ಯಾದಗಿರಿ ಜಿಲ್ಲೆಯನ್ನು ಪೂರ್ಣ ಪ್ರಮಾಣದಲ್ಲಿ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿಲ್ಲ. ಕೇವಲ ಶಹಾಪುರ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ, ಯಾದಗಿರಿ, ಗುರುಮಠಕಲ್, ವಡಗೇರಾ, ಸುರಪುರ ಹಾಗೂ ಹುಣಸಗಿ ತಾಲೂಕುಗಳನ್ನು ಕೈಬಿಟ್ಟಿರುವುದು ಖಂಡನೀಯ ಎಂದರು.
ಜಿಲ್ಲೆಯಲ್ಲಿ ಮಳೆ ಹಾಗೂ ಬೆಳೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂತರ್ಜಲ ಮಟ್ಟ ಕುಸಿದಿದ್ದು, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಜನ-ಜಾನುವಾರುಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಕೆಲಸದ ಅವಕಾಶಗಳಿಲ್ಲದೆ ರೈತರು ಹಾಗೂ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ಬೆಂಗಳೂರು, ಮುಂಬೈ ಸೇರಿದಂತೆ ಮಹಾನಗರಗಳಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಮಾತನಾಡಿ, ಜಿಲ್ಲೆಯ ವಾಸ್ತವ ಬರ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಶಾಸಕರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ಜಿಲ್ಲೆಯ ಉಳಿದ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ನಾಯಕ ಸಮಾಜ ಉತ್ತರ ಕರ್ನಾಟಕ ಭಾಗದ ರಾಜ್ಯಾಧ್ಯಕ್ಷ ಮಾರೆಪ್ಪ ನಾಯಕ ಮಗ್ದದಂಪುರ ಮಾತನಾಡಿ, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಅವರೊಂದಿಗೆ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೀಗಾಗಿ ಯಾದಗಿರಿ ಜಿಲ್ಲಾ ಕೇಂದ್ರದ ವ್ಯಾಪಾರಸ್ಥರು, ಕೃಷಿ ಮಾರುಕಟ್ಟೆ ವರ್ತಕರ ಸಂಘ, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ಸಮಾಜಗಳ ಸಂಘಟನೆಗಳು ಸೆ.7ರಂದು ನಡೆಯಲಿರುವ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೇವಿಂದ್ರಪ್ಪ ಯರಗೋಳ ನ್ಯಾಯವಾದಿಗಳು, ಖಾಸಿಮಸಾಬ್ ಗಡ್ಡೆಸೂಗೂರ, ಬಸ್ಸುಗೌಡ ಎಂ ಚಟ್ನಳ್ಳಿ, ದೊಡ್ಡಯ್ಯ ನಾಯಕಯ ಹಳಿಗೇರ, ಕಾಶಪ್ಪ ಹೇಗಣಗೇರಾ, ಭೀಮು ಪೂಜಾರಿ, ರವಿ ಪಟೇಲ್ ಜೋಳದಡಗಿ, ಅಶೋಕ ಐಕೂರ್, ಪೋಲಪ್ಪ ನಾರಾಯಣೋರ್, ಸೇರಿದಂತೆ ಅನೇಕರು ಇದ್ದರು.