ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್ ಸರಕಾರ ನಿರ್ಲಕ್ಷ್ಯ ವಹಿಸಿದೆ: ಅಮರನಾಥ ಪಾಟೀಲ್
ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು, ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಅಮರನಾಥ ಪಾಟೀಲ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿ ಮತ್ತು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಅವುಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಹುದ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿ ಖಾಲಿ ಉಳಿದಿವೆ. ಅವುಗಳನ್ನು ಭರ್ತಿ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಇದರ ಪರಿಣಾಮ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶದ ಮೇಲೂ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಅವರು ಹಿಂದಿನ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಶಿಕ್ಷಕರ ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ಪ್ರಮುಖ ವಿಚಾರಗಳನ್ನು ಸದನದಲ್ಲಿ ನಿರಂತರವಾಗಿ ಪ್ರಸ್ತಾಪಿಸಿದ್ದಾರೆ. ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅರ್ಹ ಶಿಕ್ಷಕರ ನೇಮಕಾತಿ, ಅಗತ್ಯ ಮೂಲಸೌಕರ್ಯಗಳ ಕಲ್ಪನೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಶಿಕ್ಷಕರ ಹಿತಾಸಕ್ತಿ ಕಾಪಾಡಲು ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶಶಿಲ್ ನಮೋಶಿ ಅವರನ್ನು ಶಿಕ್ಷಕ ಮತದಾರರು ಮತ್ತೊಮ್ಮೆ ಆಯ್ಕೆ ಮಾಡಬೇಕು. ಮುಂದಿನ ದಿನಗಳಲ್ಲಿಯೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಬೇಡಿಕೆಗಳ ಈಡೇರಿಕೆಗೆ ಅವರು ಶ್ರಮಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅಮರನಾಥ ಪಾಟೀಲ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಮುಖಂಡರಾದ ಶರಣಪ್ಪ ತಲ್ವಾರ್, ಲಲಿತಾ ಅನಪುರ, ರಾಚನಗೌಡ ಮುದ್ನಾಳ, ಮಹೇಶ್ ರೆಡ್ಡಿ ಮುದ್ನಾಳ, ದೇವೇಂದ್ರನಾಥ ನಾದ್, ಅಮೀನ್ರೆಡ್ಡಿ ಯಾಳಗಿ, ಹಣಮಂತ ಇಟಗಿ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.