ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಬಸರೆಡ್ಡಿ ಮಾಲಿ ಪಾಟೀಲ್ ಅನಪೂರ ಮರುನೇಮಕ
ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ ಬಸರೆಡ್ಡಿ ಮಾಲಿ ಪಾಟೀಲ್ ಅನಪೂರ ಅವರನ್ನು ಎರಡನೇ ಅವಧಿಗೆ ಮರುನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅನಪೂರ ಅವರು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ಹೈಕಮಾಂಡ್‌ನ ಗಮನ ಸೆಳೆದಿದ್ದರು. ಅವರ ಕಾರ್ಯವೈಖರಿಯನ್ನು ಪರಿಗಣಿಸಿ ಮತ್ತೊಮ್ಮೆ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿ ಜವಾಬ್ದಾರಿಯನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ.
ಬಸರೆಡ್ಡಿ ಮಾಲಿ ಪಾಟೀಲ್ ಅನಪೂರ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿ, 2017ರಲ್ಲಿ ಕೊಂಕಲ್ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯ ಪಾತ್ರವಹಿಸಿದ್ದರು. ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಜನಮುಖಿ ಕಾರ್ಯಗಳಿಂದಲೂ ಅವರು ಗುರುತಿಸಿಕೊಂಡಿದ್ದಾರೆ.
ಮರುನೇಮಕದ ಬಳಿಕ ಪ್ರತಿಕ್ರಿಯಿಸಿದ ಬಸರೆಡ್ಡಿ ಮಾಲಿ ಪಾಟೀಲ್ ಅನಪೂರ, ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡುವುದಾಗಿ ಹೇಳಿದರು.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ಕ್ರಿಯಾಶೀಲ ತಂಡಗಳನ್ನು ರಚಿಸಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲಾಗುವುದು. 2028ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸುವ ಮೂಲಕ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ.
-ಬಸರಡ್ಡಿ ಮಾಲಿ ಪಾಟೀಲ್ ಅನಪೂರ, ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ