ಸಚಿವ ಪ್ರಿಯಾಂಕ್ ಖರ್ಗೆ ಅವರ ಜನಪ್ರಿಯತೆಯನ್ನು ಕುಗ್ಗಿಸುವ ಬಿಜೆಪಿ, ಆರೆಸೆಸ್ಸ್ ತಂತ್ರ ಫಲಿಸದು : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ಹಾಗೂ ಆರೆಸೆಸ್ಸ್ ಟಾರ್ಗೆಟ್ ಮಾಡುತ್ತಿದ್ದು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮೂಲಕ ವೈಯಕ್ತಿಕ ದಾಳಿಗಿಳಿದಿವೆ. ಆದರೆ, ಜನಪರ ಕಾಳಜಿಯುಳ್ಳ ಸಚಿವರನ್ನು ಕುಗ್ಗಿಸುವ ಅವರ ತಂತ್ರ ಫಲಿಸದು ಎಂದು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಟೀಕಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಪ್ರಿಯಾಂಕ್ ಖರ್ಗೆ ಚಿಕ್ಕ ವಯಸ್ಸಿನಲ್ಲಿಯೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಐಟಿ ಬಿಟಿಯಂತಹ ಪ್ರಮುಖ ಖಾತೆಗಳ ಜವಾಬ್ದಾರಿಯನ್ನು ಹೊತ್ತುಕೊಂಡು ತಮ್ಮ ಜನಪರ ನಿಲುವು ಹಾಗೂ ಅಭಿವೃದ್ದಿ ಕಾರ್ಯಗಳ ಮೂಲಕ ಹೆಸರು ಮಾಡುತ್ತಿದ್ದಾರೆ. ಇದು ಬಿಜೆಪಿ ಹಾಗೂ ಆರೆಸೆಸ್ಸ್‌ಗಳಿಗೆ ಸಹಿಸಲಾಗುತ್ತಿಲ್ಲ. ಹಾಗಾಗಿ ಅವರನ್ನು ವೈಯಕ್ತಿಕವಾಗಿ ನಿಂದಿಸುವ ಉದ್ದೇಶದಿಂದ ನಾರಾಯಣಸ್ವಾಮಿ ಮೂಲಕ ದಾಳಿಗಿಳಿದಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ಹಾಗೂ ಬುದ್ದ, ಬಸವ ಹಾಗೂ ಅಂಬೇಡ್ಕರ ಅವರ ತತ್ವ ಚಿಂತನೆಗಳಿಂದ ಪ್ರೇರೇಪಿತವಾದ ಲಕ್ಷಾಂತರ ಕಾರ್ಯಕರ್ತರನ್ನು ಒಳಗೊಂಡ ಪಕ್ಷವಾಗಿದೆ ಎಂದು ಹೇಳಿದರು.