ಯಾದಗಿರಿ: ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ವಾದ್ರಾ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ಸಂಜೆ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಈ ಹಿನ್ನೆಲೆಯಲ್ಲಿ ಎಸ್‌ಐಆರ್‌ನಲ್ಲಿ ನಡೆದಿರುವ ಲೋಪಗಳನ್ನು ಜನರಿಗೆ ತಿಳಿಸುವ ಮೂಲಕ ಚುನಾವಣಾ ಆಯೋಗದ ಆಯುಕ್ತರನ್ನು ವಜಾಗೊಳಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಕಾರಣವಿಲ್ಲದೆ ಬಂಧಿಸಿ, ಅವರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು. ಕೂಡಲೇ ಅವರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ನೀಲಕಂಠ ಬಡಿಗೇರ, ಹಿರಿಯ ಮುಖಂಡ ಬಾಷುಮೀಯಾ ವಡಗೇರಾ, ಭೀಮರಾಯ ಠಾಣಾಗುಂದಿ, ಇರ್ಫಾನ್ ಬಾದಲ್ ಹಾಗೂ ಮಾಯಾ ಆರ್. ನಾಯಕ ಮಾತನಾಡಿ, ಜನವಿರೋಧಿ ಕೆಲಸಗಳಲ್ಲಿ ತೊಡಗಿರುವ ಕೇಂದ್ರ ಸರ್ಕಾರ ವಿನಾಕಾರಣ ತಮ್ಮ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿದರು.

ಎಸ್‌ಐಆರ್‌ನಲ್ಲಿ ಹಲವು ದೋಷಗಳಿದ್ದು, ಅವುಗಳನ್ನು ಪ್ರಶ್ನಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. ಕೂಡಲೇ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ್ ಈಟೆ, ರಾಘವೇಂದ್ರ ಮಾನನಗಲ್, ಬಾಬುರಾವ ಕಾಣ್ಣೂರ, ಶರಣಗೌಡ ಕುರಕುಂದಿ, ಲಚ್ಚಮಾರೆಡ್ಡಿ, ಕೃಷ್ಣ ದಾಸನಕೇರಿ, ಬಾಬುಗೌಡ ಮಾಚನೂರ, ಲಕ್ಷ್ಮಣ ರಾಠೋಡ್, ಚಂದ್ರಕಾಂತ್ ಮುನಿಯಪ್ಪನೂರ, ಸಾಬರೆಡ್ಡಿ ಕಲಬುರಗಿ, ನಾಯಿಬಣ್ಣ ಕೆಂಗೂರಿ, ನಿಜಲಿಂಗ ದೋರನಹಳ್ಳಿ, ಸುರೇಶ ಮಡ್ಡಿ, ಅಭಿಷೇಕ, ಹಣಮಂತರಾಯ ತೆಕರಾಳ, ಜಲಾಲಸಾಬ್ ಉಳ್ಳೆಸುಗುರು, ಶಿವು ಬೆಳಗುಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor