ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಮೂಡಿಸಿ : ಡಿಸಿ ಡಾ.ಸುಶೀಲಾ ಬಿ.
ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸೂಕ್ತ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಎರಡನೇ ತ್ರೈಮಾಸಿಕ ಅನುಸೂಚಿತ ಜಾತಿ/ಅನು ಸೂಚಿತ ಪಂಗಡ( ದೌರ್ಜನ್ಯ ನಿಯಂತ್ರಣ) ಕಾಯ್ದೆ 1995ರಡಿ ನಿಯಮ 17ರ ರೀತ್ಯಾ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದ ಮೇಲಾಗುವ ದೌರ್ಜನ್ಯ ಪ್ರಕರಣಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಅದರಂತೆ ನಕಲಿ ಪ್ರಕರಣಗಳ ಮತ್ತು ದೂರುಗಳ ಬಗ್ಗೆಯೂ ನಿಗಾ ಇಡುವ ಮೂಲಕ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿಶೇಷವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕು. ತಾಲೂಕುವಾರು, ಗ್ರಾಮವಾರು ನಡೆಯುವ ದೌರ್ಜನ್ಯ ನಿಯಂತ್ರಣ ಸಭೆಗಳಿಗೆ ತಪ್ಪದೆ ಸಮಿತಿ ಸದಸ್ಯರನ್ನು ಆಹ್ವಾನಿಸುವಂತೆ ಸೂಚಿಸಿದರು.
ಚಿನ್ನಾಕಾರ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಭವನದ ಸಮೀಪ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಅವರು ಸೂಚನೆ ನೀಡಿದರು. ಜಿಲ್ಲೆಯಲ್ಲಿ ದೌರ್ಜನ್ಯದಲ್ಲಿ ನೊಂದ 16 ಜನ ಸಂತ್ರಸ್ತರಿಗೆ ಜಿಲ್ಲಾಡಳಿತ ವತಿಯಿಂದ ಒಟ್ಟು 29.75 ಲಕ್ಷ ರೂ. ಗಳ ಪರಿಹಾರ ಧನ ವಿತರಿಸಲಾಗಿದೆ. ಬಾಕಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಧನ ನೀಡಬೇಕಾಗಿದ್ದು, ಅನುದಾನ ಬಿಡುಗಡೆ ನಂತರ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ಇದಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಅವರು ಎಸ್.ಸಿ.ಎಸ್.ಪಿ/ಟಿ ಎಸ್. ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಶೇ.100ರಷ್ಟು ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಪೃಥ್ವಿಕ್ ಶಂಕರ್, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರಾದ ಮರೆಪ್ಪ ಚಟ್ಟರ್ಕರ್, ಮಲ್ಲಣ್ಣ ಗೋಗಿ,ನಿಂಗಪ್ಪ,ದಿನೇಶ್,ರವಿ ಯಕ್ಷಂತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.