ಬರ ಪರಿಹಾರ ಬಿಡುಗಡೆಗೆ ವಿಳಂಬ; ಅಗತ್ಯವಿದ್ದರೆ ಕೋರ್ಟ್ ಮೊರೆ ಹೋಗುತ್ತೇವೆ : ಸಚಿವ ಸತೀಶ್ ಜಾರಕಿಹೊಳಿ
ಸುರಪುರ: ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈಗಾಗಲೇ ಸಮೀಕ್ಷೆ ನಡೆಸಿದ್ದರೂ, ಈವರೆಗೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಗತ್ಯವಿದ್ದರೆ ಬರ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸುರಪುರ ತಾಲೂಕಿನ ಬಂಡಳ್ಳಿ ಗ್ರಾಮದ ಬಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣದ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಿದ್ದ ಅವರು, ಹೆಲಿಪ್ಯಾಡ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಬರದಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪರಿಹಾರಕ್ಕಾಗಿ ರೈತರು ಆಗ್ರಹಿಸುವುದು ಸಹಜ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಪರಿಹಾರದ ಹಣ ಇನ್ನೂ ಬಿಡುಗಡೆಯಾಗಿಲ್ಲ. ಈ ವಿಷಯ ಮುಖ್ಯಮಂತ್ರಿಗಳ ವ್ಯಾಪ್ತಿಗೆ ಬರುವುದರಿಂದ ಅವರು ಸೂಕ್ತ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸಚಿವ ಸಂಪುಟದಲ್ಲಿ ಕ್ಷೇತ್ರ ಮರುವಿಂಗಡಣೆ ಕುರಿತು ಕೈಗೊಂಡಿರುವ ನಿರ್ಣಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸರ್ಕಾರ ಉತ್ತರ ಭಾರತಕ್ಕೆ ಮಾತ್ರ ಆದ್ಯತೆ ನೀಡಿ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಈಗಾಗಲೇ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಈ ಕುರಿತು ಹೋರಾಟ ನಡೆಯುತ್ತಿದೆ. ದಕ್ಷಿಣ ಭಾರತಕ್ಕೆ ಅನ್ಯಾಯವಾಗುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದರು.
ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಎರಡು ಸ್ಥಾನಗಳನ್ನು ಭರ್ತಿ ಮಾಡುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳು ಶೀಘ್ರದಲ್ಲೇ ಆ ಎರಡು ಸ್ಥಾನಗಳನ್ನು ಭರ್ತಿ ಮಾಡಲಿದ್ದಾರೆ. ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ದೊರೆಯುವುದು ಖಚಿತ. ಆದರೆ, ಯಾರಿಗೆ ಅವಕಾಶ ಸಿಗಲಿದೆ ಎಂಬುದು ನಮಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳೇ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.