ಯಾದಗಿರಿ: ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಸೈದಾಪೂರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುರುಮಠಕಲ್ ಕ್ಷೇತ್ರದ ಸೈದಾಪೂರ ಸೇರಿದಂತೆ ಯಾದಗಿರಿ ತಾಲೂಕಿನ ಮುಷ್ಟೂರು ಮತ್ತು ಮುದ್ನಾಳ ಗ್ರಾಮಗಳಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಫೆಬ್ರವರಿ 17ರಂದು ಮನವಿ ಸಲ್ಲಿಸಲಾಗಿತ್ತು. ಈ ಮನವಿಗೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 5ರಂದು ಪತ್ರ ಬರೆದಿದ್ದು, ಸೈದಾಪೂರ ರೈಲ್ವೆ ಮೇಲ್ಸೇತುವೆಗೆ ಮಂಜೂರಾತಿ ನೀಡಲಾಗಿದೆ. ಮುಷ್ಟೂರು ಮತ್ತು ಮುದ್ನಾಳ ಗ್ರಾಮಗಳಲ್ಲಿನ ಮೇಲ್ಸೇತುವೆ ನಿರ್ಮಾಣದ ಪ್ರಸ್ತಾವನೆಗಳು ಪರಿಶೀಲನೆಯಲ್ಲಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ್ದಾರೆ.

ಜನರ ಬಹುವರ್ಷಗಳ ಬೇಡಿಕೆಯಾಗಿದ್ದ ಸೈದಾಪೂರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೊನೆಗೂ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿರುವುದು ಸಂತೋಷದ ಸಂಗತಿಯಾಗಿದೆ. ಮೇಲ್ಸೇತುವೆ ನಿರ್ಮಾಣವಾದರೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಗಂಟೆಗಟ್ಟಲೆ ವಾಹನಗಳು ಕಾಯುವ ಪರಿಸ್ಥಿತಿ ತಪ್ಪಲಿದೆ. ದೇವದುರ್ಗ ಮತ್ತು ವಡಗೇರಾ ತಾಲೂಕುಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ನೂರಾರು ಹಳ್ಳಿಗಳ ಜನರು, ರೈತರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ತೊಂದರೆಗಳು ನಿವಾರಣೆಯಾಗಲಿವೆ ಎಂದು ಶಾಸಕರು ತಿಳಿಸಿದ್ದಾರೆ.

ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರ ಸಚಿವರ ಸ್ಪಂದನೆ :

ಯಾದಗಿರಿ ಜಿಲ್ಲೆಯ ಜನರ ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ವಂದೇ ಭಾರತ್, ರಾಜಧಾನಿ ಸೇರಿದಂತೆ ಹಲವು ರೈಲುಗಳ ನಿಲುಗಡೆಗೆ ಅವರು ಸಹಕರಿಸಿದ್ದಾರೆ ಎಂದು ಶರಣಗೌಡ ಕಂದಕೂರ ತಿಳಿಸಿದ್ದಾರೆ.

ಗುರುಮಠಕಲ್ ಪಟ್ಟಣದ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ವಂದೇ ಭಾರತ್ ಸ್ಲೀಪರ್ ರೈಲಿಗೆ ಯಾದಗಿರಿಯಲ್ಲಿ ನಿಲುಗಡೆ ಕಲ್ಪಿಸುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಜನರ ಸಮಸ್ಯೆಗಳನ್ನು ಕೇಂದ್ರ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಾಗ, ಅವುಗಳನ್ನು ಹಂತ ಹಂತವಾಗಿ ಪರಿಹರಿಸುವ ಭರವಸೆ ದೊರೆತಿದೆ. ಇದರ ಫಲವಾಗಿ ಗುರುಮಠಕಲ್ ಕ್ಷೇತ್ರದ ಸೈದಾಪೂರ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದು ಸಂತೋಷ ತಂದಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದ್ದಾರೆ. ಇದರ ಜೊತೆಗೆ ಹತ್ತಿಕುಣಿ ಡ್ಯಾಂಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಕಡೆಚೂರು-ಬಾಡಿಯಾಳ ರೈಲ್ವೆ ಕೋಚ್ ಕಾರ್ಖಾನೆಯ ಉನ್ನತೀಕರಣ ಮತ್ತು ಅಭಿವೃದ್ಧಿಗಾಗಿ 200 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಸ್ಪಂದಿಸುತ್ತಿರುವ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

-ಶರಣಗೌಡ ಕಂದಕೂರ, ಶಾಸಕ, ಗುರುಮಠಕಲ್

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor