ಹುಣಸಗಿ | ವಾರಾಬಂದಿ ರದ್ದುಪಡಿಸಿ ನ.30ರವರೆಗೆ ನಿರಂತರ ನೀರು ಹರಿಸಲು ಕರವೇ ಆಗ್ರಹ
ಹುಣಸಗಿ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಜಾರಿಯಲ್ಲಿರುವ ವಾರಾಬಂದಿ ಪದ್ಧತಿಯನ್ನು ರದ್ದುಪಡಿಸಿ, ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ, ತಾಲೂಕು ಘಟಕದ ಅಧ್ಯಕ್ಷ ರಮೇಶ ಬಿರಾದಾರ ಅವರು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿ, ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ನೀರಿನ ಅಭಾವದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕಷ್ಟಪಟ್ಟು ಬೆಳೆದ ಬೆಳೆಗಳು ಒಣಗುವ ಹಂತ ತಲುಪಿವೆ. ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಯದ ಕಾರಣ ಕೊನೆಯ ಭಾಗದ ಜಮೀನುಗಳಿಗೆ ನೀರು ತಲುಪುತ್ತಿಲ್ಲ. ಇದರಿಂದ ರೈತರು ಭಾರಿ ಪ್ರಮಾಣದ ಬೆಳೆ ನಷ್ಟ ಅನುಭವಿಸುವ ಆತಂಕ ಎದುರಿಸುತ್ತಿದ್ದಾರೆ ಎಂದು ಕರವೇ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ವಾರಾಬಂದಿ ಪದ್ಧತಿಯಿಂದ ರೈತರಿಗೆ ಎದುರಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ, ನವೆಂಬರ್ 30ರವರೆಗೆ ಕಾಲುವೆಗಳಿಗೆ ಪೂರ್ಣ ಪ್ರಮಾಣದಲ್ಲಿ ನಿರಂತರವಾಗಿ ನೀರು ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ರೈತರ ಬೆಳೆಗಳನ್ನು ಉಳಿಸಲು ಹಾಗೂ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಲು ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರೈತರ ಸಂಕಷ್ಟಕ್ಕೆ ಸ್ಪಂದಿಸಿ ನಿರಂತರವಾಗಿ ನೀರು ಹರಿಸದಿದ್ದರೆ, ಸಂಕಷ್ಟಕ್ಕೆ ಸಿಲುಕಿರುವ ರೈತರ ಪರವಾಗಿ ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ರಮೇಶ ಬಿರಾದಾರ ಎಚ್ಚರಿಕೆ ನೀಡಿದ್ದಾರೆ.