×
Ad

ಹುಣಸಗಿ | ಹೊರಟ್ಟಿ ಗ್ರಾಮದಲ್ಲಿ 40 ಮಕ್ಕಳಿಗೆ ಜ್ವರ : ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು

Update: 2026-06-13 20:50 IST

ಹುಣಸಗಿ: ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಸುಮಾರು 40 ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಶುಕ್ರವಾರ ಮಧ್ಯಾಹ್ನ ಗ್ರಾಮದಲ್ಲಿನ ಶಾಲೆಯ ಕೆಲ ವಿದ್ಯಾರ್ಥಿಗಳಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಪರಿಸ್ಥಿತಿಯನ್ನು ಗಮನಿಸಿದ ಮುಖ್ಯಗುರು ಮಲ್ಲಿಕಾರ್ಜುನ ಅವರು ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಮನೆಗೆ ಕಳುಹಿಸಿದ್ದರು. ಬಳಿಕ ಶನಿವಾರ ಹಲವಾರು ಮಕ್ಕಳಲ್ಲಿ ಜ್ವರದ ತೀವ್ರತೆ ಹೆಚ್ಚಾದ ಕಾರಣ ಅವರನ್ನು ಕೊಡೇಕಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಒಟ್ಟು 20 ಮಕ್ಕಳಿಗೆ ಹೊರರೋಗಿ ವಿಭಾಗದಲ್ಲಿ (ಒಪಿಡಿ) ಚಿಕಿತ್ಸೆ ನೀಡಲಾಗುತ್ತಿದ್ದು, ನಾಲ್ವರು ಮಕ್ಕಳನ್ನು ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾದಲ್ಲಿರಿಸಲಾಗಿದೆ. ಉಳಿದ ಮಕ್ಕಳನ್ನು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯ ಮೇಲೂ ವೈದ್ಯರು ನಿಗಾ ವಹಿಸುತ್ತಿದ್ದಾರೆ.

ಸುರಪುರ ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಪ್ಪನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜ್ವರ ಕಾಣಿಸಿಕೊಂಡ 18 ಮಕ್ಕಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಜ್ವರದ ನಿಖರ ಕಾರಣ ತಿಳಿಯಲಿದೆ ಎಂದು ಅವರು ಹೇಳಿದರು.

ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಘಟನೆ ಕುರಿತು ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಲಿಂಗರಾಜ ಮೂಲಿಮನಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಮಾಜಿ ಸಚಿವ ನರಸಿಂಹನಾಯಕ (ರಾಜುಗೌಡ) ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಮಕ್ಕಳ ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜ್ವರದ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮಕ್ಕೆ ಭೇಟಿ ನೀಡಿ ಸ್ವಚ್ಛತೆ, ಕುಡಿಯುವ ನೀರಿನ ಗುಣಮಟ್ಟ ಹಾಗೂ ಸಾಂಕ್ರಾಮಿಕ ರೋಗಗಳ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಅಗತ್ಯ ಔಷಧಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News