ಹುಣಸಗಿ: ತಾಲೂಕಿನ ಬರದೇವನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರೆಕನಾಳ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಅಂತರ್ಜಲ ಪುನಶ್ಚೇತನ ತೊಟ್ಟಿ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕ (ಗ್ರಾ.ಉ) ಶ್ರೀಶೈಲ್ ಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಲ ಸಮೃದ್ಧಿ ಕಾಮಗಾರಿಗಳಿಂದ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿ, ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಗುಣಮಟ್ಟ ಮತ್ತು ಪ್ರಗತಿ ಕುರಿತು ಅವರು ಮಾಹಿತಿ ಪಡೆದರು.

ಕಾಮಗಾರಿಗಳನ್ನು ನಿಗದಿತ ಮಾನದಂಡ ಹಾಗೂ ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಕೈಗೊಳ್ಳಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರು ಹಾಗೂ ರೈತರಿಗೆ ಯೋಜನೆಯ ಸಮರ್ಪಕ ಪ್ರಯೋಜನ ದೊರೆಯುವಂತೆ ಕ್ರಮವಹಿಸಬೇಕು ಎಂದು ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.

ಅಂತರ್ಜಲ ಪುನಶ್ಚೇತನ ಹಾಗೂ ಸಮಗ್ರ ಅಭಿವೃದ್ಧಿಯಿಂದ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದ ನೀರು ಸಂಗ್ರಹಿಸಲು ಸಾಧ್ಯವಾಗಲಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳ, ಕೃಷಿ ಚಟುವಟಿಕೆಗಳಿಗೆ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಪ್ರದೇಶದ ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಸ್ಥಳೀಯ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜತೆಗೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಆದ್ದರಿಂದ ಯೋಜನೆಯ ಮಾರ್ಗಸೂಚಿಗಳಂತೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಕೂಲಿ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ಮಾಹಿತಿ :

ಇದೇ ಸಂದರ್ಭದಲ್ಲಿ ಜಾಬ್ ಕಾರ್ಡ್ ಮೇಳದ ಕುರಿತು ಅಕುಶಲ ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡಲಾಯಿತು. ಕೆಲಸದ ಬೇಡಿಕೆ ಸಲ್ಲಿಸಿದ 15 ದಿನಗಳೊಳಗೆ ತಮ್ಮ ಗ್ರಾಮದಲ್ಲಿಯೇ ಕೆಲಸ ದೊರೆಯಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಲಾಯಿತು.

ಪ್ರತಿ ಆರ್ಥಿಕ ವರ್ಷದಲ್ಲಿ 125 ದಿನಗಳ ಕೂಲಿ ಲಭ್ಯವಿದ್ದು, ಪ್ರತಿ ಮಾನವ ದಿನಕ್ಕೆ 382 ರೂ. ಕೂಲಿ ದೊರೆಯಲಿದೆ. ಇದರಿಂದ ವಾರ್ಷಿಕವಾಗಿ 47,750 ರೂ. ವರೆಗೆ ಕೂಲಿ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕೂಲಿಕಾರರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆಗೆ ನೋಂದಾಯಿಸಿಕೊಳ್ಳಬೇಕು. ಆಕಸ್ಮಿಕ ಸಾವು ಸಂಭವಿಸಿದ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ನೆರವು ದೊರೆಯಲಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ಕೂಲಿಕಾರರು ಇ-ಕೆವೈಸಿ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಹಾಗೂ ಕೆಲಸದ ದಿನಗಳಲ್ಲಿ ಎರಡು ಹಂತದ ಎನ್‌ಎಂಎಂಎಸ್ ಹಾಜರಾತಿ ತಪ್ಪದೇ ದಾಖಲಿಸಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಸುನೀಲ್ ಕುಮಾರ್, ಪಿಡಿಒ ಪ್ರೇಮಾ ಪವಾರ್, ತಾಂತ್ರಿಕ ಸಹಾಯಕ ಮಹೇಶ್ ಶೆಟ್ಟಿ, ಬಿಎಫ್‌ಟಿ ಅಂಬರೀಷ್, ಜಿಕೆಎಂ ವನುಜಾ, ಕಾಯಕ ಬಂಧುಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor