ಹುಣಸಗಿ | ದಲಿತರ ಮೇಲಿನ ಹಲ್ಲೆ, ಕೊಲೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಹುಣಸಗಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ನಡೆದ ದಲಿತ ವ್ಯಕ್ತಿಯ ಕೊಲೆ ಹಾಗೂ ಸುರಪುರ ತಾಲೂಕಿನ ಶಖಾಪುರ ಎಸ್.ಎಚ್. ಗ್ರಾಮದಲ್ಲಿ ಶವ ಹೂಳಲು ನಿರಾಕರಿಸಿದ ಘಟನೆಗೆ ಸಂಬಂಧಿಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗಾಗಿ ಜಿಲ್ಲಾಧಿಕಾರಿಗಳು ಉನ್ನತ ಮಟ್ಟದ ತನಿಖಾ ತಂಡ ರಚಿಸಬೇಕು ಎಂದು ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಳದ ಜಿಲ್ಲಾಧ್ಯಕ್ಷ ಕಾಶಿನಾಥ್ ಯಾದಗಿರಿ ಒತ್ತಾಯಿಸಿದರು.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ಜಿಲ್ಲೆ ಹಾಗೂ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಹಲ್ಲೆ, ಕೊಲೆ ಸೇರಿದಂತೆ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ದಲಿತ ಸಮುದಾಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.
ಹಲ್ಲೆಗೊಳಗಾದ ಸಂತ್ರಸ್ತರು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ನ್ಯಾಯ, ರಕ್ಷಣೆ ಮತ್ತು ಪರಿಹಾರ ಒದಗಿಸಬೇಕು. ಇಂತಹ ಘಟನೆಗಳು ಕಾನೂನು ಆಳ್ವಿಕೆ, ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದರು.
ಜಾತಿ ಆಧಾರಿತ ಹಲ್ಲೆ, ಅವಮಾನ ಹಾಗೂ ಬೆದರಿಕೆಯಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಭಾಗಗಳಲ್ಲಿ ದಲಿತರ ಕುಂದುಕೊರತೆ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಸಂತ್ರಸ್ತರಿಗೆ ಕಾನೂನುಬದ್ಧವಾಗಿ ವಾಸಿಸಲು ಅಗತ್ಯ ಸೂರು ಹಾಗೂ ಇತರ ಸೌಲಭ್ಯಗಳನ್ನು ಒದಗಿಸಬೇಕು. ಇತ್ತೀಚೆಗೆ ನಡೆದ ಎರಡೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.