ಹುಣಸಗಿ | ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ : ಡಾ.ಸೋಪಿಸಾಬ ಆರೋಪ
ಹುಣಸಗಿ: ಯಾದಗಿರಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಘೋಷಣೆಯಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಪಿಂಜಾರ ನದಾಫ ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯ ಉಪಾಧ್ಯಕ್ಷ ಡಾ. ಸೋಪಿಸಾಬ ಡಿ. ಸುರಪುರ ಆರೋಪಿಸಿದ್ದಾರೆ.
ಕಳೆದ ಜಿಲ್ಲಾ ಪಂಚಾಯಿತಿ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಒಬ್ಬರೂ ಸದಸ್ಯರಾಗಿ ಆಯ್ಕೆಯಾಗಿರಲಿಲ್ಲ. ಈ ಬಾರಿಯೂ ಅಂತಹ ಪರಿಸ್ಥಿತಿ ಮರುಕಳಿಸದಂತೆ ರಾಜಕೀಯ ಪಕ್ಷಗಳು ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಮುಸ್ಲಿಂ ಸಮುದಾಯದ ಅರ್ಹ ಆಕಾಂಕ್ಷಿಗಳಿಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸೇರಿದಂತೆ ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳು ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಾದರೂ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡುವ ಮೂಲಕ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸಮುದಾಯಗಳಿಗೂ ಸೂಕ್ತ ಅವಕಾಶ ದೊರೆಯಬೇಕು. ಆದರೆ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಒದಗಿಸುವ ವಿಚಾರದಲ್ಲಿ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.