ಹುಣಸಗಿ | ದೇಶಭಕ್ತಿ, ಸಂವಿಧಾನ ಮೌಲ್ಯಗಳ ಪಾಲನೆ ಪ್ರತಿಯೊಬ್ಬರ ಕರ್ತವ್ಯ: ತಹಶೀಲ್ದಾರ್ ಬಸವರಾಜ್

Update: 2026-08-15 19:15 IST

ಹುಣಸಗಿ: ದೇಶಭಕ್ತಿ ಬೆಳೆಸಿಕೊಳ್ಳುವುದರ ಜೊತೆಗೆ ಸಂವಿಧಾನದ ಮೌಲ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಹಶೀಲ್ದಾರ್ ಎಂ. ಬಸವರಾಜ್ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕರೂ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಅರಿತು ನಡೆಯಬೇಕು ಎಂದು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ ನಾಯಕ ಮಾತನಾಡಿ, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ. ಸ್ವಚ್ಛತೆ, ಶಿಕ್ಷಣ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಮುಖ್ಯವಾಗಿದೆ ಎಂದರು.

ರಂಗಪೇಠ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜಗೋಪಾಲ್ ವಿಭೂತಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿ, ಸ್ವಾತಂತ್ರ್ಯ ಹೋರಾಟದ ಇತಿಹಾಸ, ಹೋರಾಟಗಾರರ ತ್ಯಾಗ ಹಾಗೂ ದೇಶದ ಏಕತೆ, ಅಖಂಡತೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತ ಬಸವರಾಜ್ ಎಂ. ಶಾರದಳ್ಳಿ ಹಾಗೂ ಕರವೇ ಸಂಘಟನೆಯ ಶಿವರಾಜ್ ಹೊಕ್ರಾಣಿ ಅವರನ್ನು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮುಖಂಡ ಚಂದ್ರಶೇಖರ ದಂಡಿನ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಮರಲಿಂಗಪ್ಪ ನಾಟೇಕರ್, ಸಿಪಿಐ ರವಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕು. ಲತಾ ಪ್ರಾರ್ಥಿಸಿದರು. ಮಲ್ಲಿಕಾರ್ಜುನ ಗುತ್ತೇದಾರ ನಿರೂಪಿಸಿದರು. ವೆಂಕಟೇಶ ವಂದಿಸಿದರು.

ವಿವಿಧೆಡೆ ಸ್ವಾತಂತ್ರ್ಯ ದಿನಾಚರಣೆ :

ಹುಣಸಗಿ ಪಟ್ಟಣ ಪತ್ತಿನ ಸಹಕಾರಿ ಸಂಘದಲ್ಲಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಡಿಸಿ ಅಧ್ಯಕ್ಷ ಬಸವರಾಜ್ ಸಜ್ಜನ್, ಶ್ರೀ ನೀಲಕಂಠೇಶ್ವರ ಪ್ರಾಥಮಿಕ ಶಾಲೆಯಲ್ಲಿ ಅಧ್ಯಕ್ಷ ಬಸವರಾಜ್ ವೈಲಿ, ಆಶೀರ್ವಾದ ಗ್ಲೋಬಲ್ ಸಂಸ್ಥೆಯಲ್ಲಿ ಅಧ್ಯಕ್ಷ ಡಾ. ವೀರಭದ್ರಗೌಡ ಹೊಸಮನಿ ಹಾಗೂ ಬಲಶೆಟ್ಟಿಹಾಳ ಗ್ರಾಮದ ಶಾರದಾ ಮಹಿಳಾ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಕ್ಷ ನಿಕೀಲ್ ಧ್ವಜಾರೋಹಣ ನೆರವೇರಿಸಿದರು.

ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಅಧ್ಯಕ್ಷ ಸಿದ್ರಾಮಪ್ಪ ಮುದಗಲ್, ನೂತನ ನೀಲಕಂಠೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಅಧ್ಯಕ್ಷ ಸಂಗಣ್ಣ ಸಾಹುಕಾರ ವೈಲಿ ಹಾಗೂ ಶರಣ ವೀರೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಸದಸ್ಯ ಪ್ರಕಾಶ್ ಅಂಗಡಿ ಧ್ವಜಾರೋಹಣ ನೆರವೇರಿಸಿದರು.

ಇನ್ನುಳಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿಯೂ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News