ಸುರಪುರ: ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಮೀಪ ನೂತನವಾಗಿ ನಿರ್ಮಿಸಲಾಗಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ವಸತಿ ನಿಲಯವನ್ನು ಉದ್ಘಾಟಿಸಿ ಮಾತನಾಡಿ, ಹಲವು ವರ್ಷಗಳಿಂದ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವನ್ನು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ಈ ಸಮಸ್ಯೆಗೆ ಪರಿಹಾರವಾಗಿ 3 ಕೋಟಿ ರೂ. ಅನುದಾನದಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ವಿದ್ಯಾರ್ಥಿಗಳು ವಸತಿ ನಿಲಯದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು. ಶಿಕ್ಷಣದ ಮೂಲಕ ಜೀವನದಲ್ಲಿ ಉನ್ನತಿ ಸಾಧಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸರಸ್ವತಿ ಪೂಜೆ ನೆರವೇರಿಸಿ, ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಅಬ್ದುಲ್ ಗಫರ್ ನಗನೂರಿ, ಕೆಕೆಆರ್‌ಡಿಬಿ ನಾಮನಿರ್ದೇಶಿತ ಸದಸ್ಯ ವೆಂಕಟೇಶ ಹೊಸಮನಿ, ಕಮ್ರುದ್ದೀನ್ ನಾರಾಯಣಪೇಟ, ಮಹ್ಮದ್ ಶರೀಫ್, ಧರ್ಮಣ್ಣ ಮಡಿವಾಳ, ನಾಸೀರ್ ಹುಸೇನ್ ಕುಂಡಾಲೆ, ಪ್ರಕಾಶ ಅಲಬನೂರ, ಶಕೀಲ್ ಅಹಮದ್ ಖುರೇಶಿ, ಮಲ್ಲಣ್ಣ ಹುಬ್ಬಳ್ಳಿ, ಮಹಮ್ಮದ್ ಗೌಸ್ ಕಿಣ್ಣಿ, ಮೌಲಾಸಾಬ್, ಮಹಿಬೂಬ್ ಖುರೇಷಿ, ಕೆಆರ್‌ಐಡಿಎಲ್ ಅಧಿಕಾರಿಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯದ ಮೇಲ್ವಿಚಾರಕ ಗ್ಯಾನಪ್ಪ ಮೇಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ