×
Ad

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಸಿಎಂ ಘೋಷಿಸಿದ್ದಾರೆ : ಸಚಿವ ಶರಣಬಸಪ್ಪ ದರ್ಶನಾಪುರ

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

Update: 2025-09-17 17:04 IST

ಯಾದಗಿರಿ: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ವೇಗ ನೀಡಲು ಹಾಗೂ ಮೇಲುಸ್ತುವಾರಿ ವಹಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಕವಾಯತು ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ನಂತರ ಅವರು ಮಾತನಾಡಿದರು.

ಕೃಷ್ಣ ಮೇಲ್ದಂಡೆ ಯೋಜನೆಯ (ಯುಕೆಪಿ) ಮೂರನೇ ಹಂತದ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಪರಿಹಾರ ನಿಗದಿ ಮಾಡಿದೆ. ಆಲಮಟ್ಟಿ ಜಲಾಶಯವನ್ನು 519 ಮೀ.ರಿಂದ 524 ಮೀ.ಗೆ ಎತ್ತರಿಸುವುದರಿಂದ ಎರಡೂವರೆ ಲಕ್ಷ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ಮುಳುಗಡೆಯಾಗುವ 75,563 ಎಕರೆ ಪ್ರದೇಶಕ್ಕೆ ಪ್ರತಿ ಎಕರೆ ನೀರಾವರಿ ಭೂಮಿಗೆ ಕನಿಷ್ಠ 40 ಲಕ್ಷ ರೂ., ಒಣಭೂಮಿಗೆ 30 ಲಕ್ಷ ರೂ. ಪರಿಹಾರ ಪಾವತಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.

ಭಾರತ ಸ್ವಾತಂತ್ರ್ಯದ ಒಂದು ವರ್ಷ, ಒಂದು ತಿಂಗಳು, ಎರಡು ದಿನಗಳ ನಂತರ ಕಲ್ಯಾಣ ಕರ್ನಾಟಕ ಭಾಗ ಸ್ವಾತಂತ್ರ್ಯ ಪಡೆಯಿತು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಪರೇಶನ್ ಪೋಲೋ ಮೂಲಕ ಹೈದರಾಬಾದ್ ಕರ್ನಾಟಕ ಭಾರತ ಒಕ್ಕೂಟಕ್ಕೆ ಸೇರಿತು. ಈ ಹೋರಾಟದಲ್ಲಿ ರಮಾನಂದ ತೀರ್ಥ, ಶರಣಗೌಡ ಇನಾಮದಾರ, ಅಚ್ಚಪ್ಪಗೌಡ ಸುಬೇದಾರ್, ಸುರಪುರದ ರಾಜಾ ವೆಂಕಟಪ್ಪ ನಾಯಕ ಮುಂತಾದ ಹೋರಾಟಗಾರರು ಸ್ಮರಣೀಯರಾಗಿದ್ದಾರೆ ಎಂದು ಹೇಳಿದರು.

ನಂಜುಂಡಪ್ಪ ವರದಿ ಆಧಾರವಾಗಿ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಕಾಲಂ 371(ಜೆ) ಅನ್ವಯ ಕಲ್ಯಾಣ ಕರ್ನಾಟಕ ಭಾಗಕ್ಕೆ 5,000 ಕೋಟಿ ರೂ. ಮೀಸಲಿರಿಸಲಾಗಿದ್ದು, ಹಳೆ ಮೈಸೂರು ಭಾಗದಂತೆ ಈ ಭಾಗವೂ ಶಿಕ್ಷಣ ಕ್ರಾಂತಿಯ ಮೂಲಕ ಪ್ರಗತಿ ಸಾಧಿಸಬೇಕು. ಶಿಕ್ಷಕರು, ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಶಿಕ್ಷಣ, ನೀರಾವರಿ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಸಚಿವಾಲಯ ಘೋಷಿಸಲಾಗಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ವಚ್ಛ ಭಾರತ ಹಿ ಸೇವಾ ಅಭಿಯಾನ ಮತ್ತು ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಗಳಿಗೆ ಚಾಲನೆ ನೀಡಲಾಯಿತು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಛಲವಾದಿ ಟಿ.ನಾರಾಯಣ್ ಸ್ವಾಮಿ, ಸಂಸದ ಜಿ.ಕುಮಾರ್ ನಾಯಕ್, ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ, ಎಸ್‌ಪಿ ಪೃಥ್ವಿಕ್ ಶಂಕರ್ ಸೇರಿದಂತೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News