ಯಾದಗಿರಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸಿ ಪರಿಹಾರ ನೀಡುವಂತೆ ಕರವೇ ಒತ್ತಾಯ
ಸುರಪುರ: ಯಾದಗಿರಿ ಜಿಲ್ಲೆಯಾದ್ಯಂತ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ಕೂಡಲೇ ಬರಪೀಡಿತ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ಮಾತನಾಡಿ, ಆರಂಭದಲ್ಲಿ ಅಲ್ಪ ಪ್ರಮಾಣದ ಮಳೆಯಾದ ಹಿನ್ನೆಲೆಯಲ್ಲಿ ರೈತರು ಬಿತ್ತನೆ ನಡೆಸಿದ್ದರು. ಆದರೆ ನಂತರ ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗಿ, ಬೀಜ ಹಾಗೂ ಗೊಬ್ಬರಕ್ಕೆ ಮಾಡಿದ ಹೂಡಿಕೆಯೂ ನಷ್ಟವಾಗಿದೆ ಎಂದು ಹೇಳಿದರು.
ಸ್ವತಃ ಮುಖ್ಯಮಂತ್ರಿ ಜಲಾಶಯಗಳಲ್ಲಿ ನೀರಿನ ಕೊರತೆಯಿಂದ ರೈತರು ನಾಟಿ ಮಾಡದಂತೆ ಹೇಳಿರುವುದು ಜಿಲ್ಲೆಯ ಬರ ಪರಿಸ್ಥಿತಿಗೆ ಸಾಕ್ಷಿಯಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ, ಎಲ್ಲಾ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪರಿಹಾರ ವಿತರಣೆಯಲ್ಲಿ ಯಾವುದೇ ತಾರತಮ್ಯ ಮಾಡದೆ, ಎಲ್ಲಾ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರದ ಮೊತ್ತ ಜಮಾ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಬಳಿಕ ಮುಖ್ಯಮಂತ್ರಿ ಅವರಿಗೆ ಉದ್ದೇಶಿಸಿ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಮಹಮ್ಮದ್ ಹುಸೇನ್ ಶಕ್ಲಿ, ಮಹಬೂಬ್ ಮಾಸ್ಟರ್, ನಿಂಗಣ್ಣ ಗೌಡ ಸತ್ಯಂಪೇಟೆ, ಚಾಂದ ಪಾಶ ಕುಂಬಾರಪೇಟ, ಭೀಮಣ್ಣ ರಾಯಗೇರ, ಹಸನ ಪಟೇಲ್, ದೀವಳಗುಡ್ಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.