ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಪೋಟೊ, ವಿಡಿಯೊ ಹಂಚಿಕೊಂಡರೆ ಕಾನೂನು ಕ್ರಮ: ಎಸ್‌ಪಿ ಪೃಥ್ವಿಕ್ ಶಂಕರ್
ಯಾದಗಿರಿ : ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.
ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿ, ಕುಟುಂಬ ಸದಸ್ಯರ ಫೋಟೊಗಳು ಹಾಗೂ ಸಂಗ್ರಹಿತ ವಿಡಿಯೊ ಕ್ಲಿಪ್‌ಗಳನ್ನು ವಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು ಅಥವಾ ಶೇರ್ ಮಾಡುವುದು ಕಾನೂನುಬಾಹಿರ. ಇಂತಹ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 20/25/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆ-2012ರ ಕಲಂ 12ರಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಸಾರ್ವಜನಿಕರು ಜವಾಬ್ದಾರಿಯಿಂದ ವರ್ತಿಸಿ, ಬಾಲಕಿಯ ಗೌಪ್ಯತೆ ಕಾಪಾಡಲು ಸಹಕರಿಸಬೇಕು ಎಂದು ಎಸ್‌ಪಿ ಮನವಿ ಮಾಡಿದ್ದಾರೆ.