ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಪ್ರಜಾ ಸೇವೆ’ ಅಭಿಯಾನ: ಸಚಿವ ಶರಣಪ್ರಕಾಶ್ ಪಾಟೀಲ್
ಸುರಪುರದಲ್ಲಿ ಪ್ರಜಾ ಸೇವಾ ಅಭಿಯಾನಕ್ಕೆ ಚಾಲನೆ
ಯಾದಗಿರಿ: ಸಮಾಜದ ಕಟ್ಟಕಡೆಯ ಬಡ ಹಾಗೂ ಸಾಮಾನ್ಯ ಜನರಿಗೆ ಸ್ವಾಭಿಮಾನದ ಬದುಕು ರೂಪಿಸಿಕೊಡುವತ್ತ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ಸುರಪುರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ನೂತನ ‘ಪ್ರಜಾ ಸೇವೆ’ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ಮುಖ್ಯಮಂತ್ರಿಗಳ ಪರಿಕಲ್ಪನೆಯಂತೆ ‘ಪ್ರಜಾ ಸೇವೆ’ ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಿದೆ. ವಿಶೇಷವಾಗಿ ಬಡವರು ಹಾಗೂ ಸಾಮಾನ್ಯ ಜನರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ತಾಲೂಕು ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಪ್ರಜಾ ಸೇವೆ’ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಉಳಿದ ಶನಿವಾರಗಳಲ್ಲಿ ಹೋಬಳಿ ಮಟ್ಟದಲ್ಲಿ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಜನಸ್ನೇಹಿ ಆಡಳಿತ ನೀಡುವ ಗುರಿಯೊಂದಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದೀಗ ‘ಪ್ರಜಾ ಸೇವೆ’ ಮೂಲಕ ಜನರ ಅಹವಾಲುಗಳಿಗೆ ನೇರವಾಗಿ ಸ್ಪಂದಿಸುವ ವ್ಯವಸ್ಥೆ ರೂಪಿಸಲಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮನ್ವಯದಿಂದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುರಪುರ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮಾತನಾಡಿ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಕಾಳಜಿಯಿಂದ ‘ಪ್ರಜಾ ಸೇವೆ’ ಅಭಿಯಾನ ಆರಂಭಿಸಲಾಗಿದೆ. ಸಾರ್ವಜನಿಕರು ಪ್ರತಿ ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಅಥವಾ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು ಎಂದು ತಿಳಿಸಿದರು.
ಸುರಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಈ ಅಭಿಯಾನ ಆರಂಭವಾಗಿರುವುದು ಸಂತಸದ ಸಂಗತಿ. ಜನರ ಸೇವೆಗೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಸದಾ ಬದ್ಧರಾಗಿದ್ದಾರೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪೂರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ್ , ಸುರಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೆದಾರ್, ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ, ಸಹಾಯಕ ಆಯುಕ್ತ ಶ್ರೀಧರ್ ಗೋಟುರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.