ಎಸ್‌ಐಆರ್ ಕುರಿತು ಯಾದಗಿರಿಯಲ್ಲಿ ಜನಜಾಗೃತಿ ಕಾರ್ಯಾಗಾರ
ಎಸ್‌ಐಆರ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಅಗತ್ಯ: ಮರೆಪ್ಪ ಚಟ್ಟೇಕರ್
ಯಾದಗಿರಿ: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಾಗರಿಕ ಮತಕಾವಲು ಸಮಿತಿಯ ವತಿಯಿಂದ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನಜಾಗೃತಿ ಕಾರ್ಯಾಗಾರ ಆಯೋಜಿಸಲಾಯಿತು.
ಎದ್ದೇಳು ಕರ್ನಾಟಕದ ನೇತೃತ್ವದಲ್ಲಿ, ಯಾದಗಿರಿ ಜಮಾತ್ ಇಸ್ಲಾಮಿಕ್ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಹಾಗೂ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಾರ್ವಜನಿಕರು ಸಮರ್ಪಕ ಮಾಹಿತಿ ಪಡೆದುಕೊಳ್ಳಬೇಕು. ಅರ್ಹ ಮತದಾರರು ಎನ್ಯೂಮರೇಷನ್ ಫಾರಂ ಅನ್ನು ಕಡ್ಡಾಯವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಳಿಯುವಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಬ್ದುಲ್ ಸುಭಾನ್ ಅವರು ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ, ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಮತದಾರರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಇಟೆ, ನಿವೃತ್ತ ವೈದ್ಯಾಧಿಕಾರಿ ಡಾ. ಭಗವಂತ ಅನವಾರ, ಜಿಲ್ಲಾ ಸಂಯೋಜಕ ಮೊಹಮ್ಮದ್ ಸಲೀಂ, ಎಂ.ಡಿ. ಜಿಲಾನಿ ಸಾಬ್, ಎಂ.ಡಿ. ಶುಭಾನ್ ಸಾಬ್ ಸೇರಿದಂತೆ ವಿವಿಧ ಮುಖಂಡರು, ಸಮಿತಿ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.