ನಾರಾಯಣಪುರ ಕಾಲುವೆಗಳಿಗೆ ನೀರು ಹರಿಸಿ: ಸಿಎಂಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಮನವಿ

ನೀರಾವರಿ ಸಲಹಾ ಸಮಿತಿ ಸಭೆ ಕರೆಯಲು ಒತ್ತಾಯ

Update: 2026-07-27 18:48 IST

ಸುರಪುರ: ನಾರಾಯಣಪುರ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕುರಿತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ರಾಜಾ ವೇಣುಗೋಪಾಲ ನಾಯಕ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು, ನೀರಿನ ಸಂಗ್ರಹ ಮಟ್ಟವೂ ಭರ್ತಿಯಾಗುವ ಹಂತದಲ್ಲಿದೆ. ಆದರೆ ಸಮರ್ಪಕ ಮಳೆಯಾಗದ ಕಾರಣ ರೈತರು ಕೃಷಿ ಚಟುವಟಿಕೆ ಆರಂಭಿಸಲು ಕಾಲುವೆ ನೀರಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲಾಗುತ್ತಿದ್ದು, ಅದೇ ನೀರನ್ನು ಕಾಲುವೆಗಳ ಮೂಲಕ ಹರಿಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದ್ದರಿಂದ ನೀರಾವರಿ ಸಲಹಾ ಸಮಿತಿ ಸಭೆಯನ್ನು ತುರ್ತಾಗಿ ಕರೆದು ಕಾಲುವೆಗಳಿಗೆ ನೀರು ಹರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಮನವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News