ಶಹಾಪುರ: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಅಪಘಾತಗಳನ್ನು ನಿಯಂತ್ರಿಸಲು ಪ್ರತ್ಯೇಕ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಸರ್.ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷ ಪ್ರದೀಪ ಅಣಬಿ ಆಗ್ರಹಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ಶಹಾಪುರ ನಗರದಲ್ಲಿ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಚಾಮರಾಜನಗರ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ರಸ್ತೆ ಬದಿಯ ವಾಹನ ನಿಲುಗಡೆ, ಸಂಚಾರಿ ಸಿಗ್ನಲ್‌ಗಳ ಕೊರತೆ ಹಾಗೂ ಅತಿವೇಗದ ಚಾಲನೆಯಿಂದ ಸಂಚಾರ ಸಮಸ್ಯೆ ಮತ್ತು ಅಪಘಾತಗಳ ಆತಂಕ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ವಾರದ ಸಂತೆ, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಪ್ರಸ್ತುತ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯೇ ಕಾನೂನು ಮತ್ತು ಸುವ್ಯವಸ್ಥೆಯ ಜತೆಗೆ ಸಂಚಾರ ನಿಯಂತ್ರಣದ ಜವಾಬ್ದಾರಿಯನ್ನೂ ನಿರ್ವಹಿಸುತ್ತಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿದೆ. ಈ ಹಿಂದೆ ಹಲವು ಬಾರಿ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಶಹಾಪುರಕ್ಕೆ ಪ್ರತ್ಯೇಕ ಸಂಚಾರಿ ಪೊಲೀಸ್ ಠಾಣೆ ಮಂಜೂರು ಮಾಡಿ, ಅಗತ್ಯ ಸಿಬ್ಬಂದಿ ನೇಮಿಸಬೇಕು ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor