ಯಾದಗಿರಿ: ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆ ಮಸೂದೆ ಮಂಡಿಸುವ ಸಂದರ್ಭದಲ್ಲಿ ದಕ್ಷಿಣ ಭಾರತದ ಯಾವುದೇ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ನಡೆಸಲಾಗುತ್ತಿದೆ. ಕ್ಷೇತ್ರ ಮರುವಿಂಗಡಣೆಯಲ್ಲಿ ನಮ್ಮ ರಾಜ್ಯಕ್ಕೆ ನ್ಯಾಯ ಸಿಗಬೇಕು. ಯಾವುದೇ ಅನ್ಯಾಯವಾಗದ ರೀತಿಯಲ್ಲಿ ಕ್ಷೇತ್ರಗಳ ಮರುವಿಂಗಡಣೆ ಮಾಡಬೇಕು ಎಂದರು.

ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾದರೆ ಸಂಸತ್ತಿಗೆ ಹೋಗುವ ಅಗತ್ಯವೇ ಇರುವುದಿಲ್ಲ. ಹಿಂದಿ ಭಾಷಿಕ ರಾಜ್ಯಗಳಿಗೆ ಮಾತ್ರ ಪ್ರಾಮುಖ್ಯತೆ ನೀಡದೆ, ಎಲ್ಲ ರಾಜ್ಯಗಳಿಗೂ ನ್ಯಾಯ ಸಿಗಬೇಕು ಎಂದು ಹೇಳಿದರು.

ಸಚಿವ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಪಕ್ಷವೇ ತೀರ್ಮಾನ ಕೈಗೊಳ್ಳಲಿದೆ. ಎರಡು ಸಚಿವ ಸ್ಥಾನಗಳಲ್ಲಿ ಒಂದನ್ನು ಮಹಿಳೆಯರಿಗೆ ನೀಡಬೇಕು ಎಂಬ ಬೇಡಿಕೆಯಿದೆ ಎಂದರು.

ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ಅವರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದೆ. ಮುಖ್ಯಮಂತ್ರಿ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪ್ರತಿಭಟನೆಗೆ ತಕ್ಷಣವೇ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ, ಅದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ