ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು: ಶಾಸಕ ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ: ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮಾಡುವಂತಾಗಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ರಾಜ್ಯ ಮಟ್ಟದ ಯುವಜನೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಯಾವುದೇ ಸ್ಪರ್ಧೆಗಳಲ್ಲಿ ಸೋಲು- ಗೆಲುವು ಎರಡು ನಾಣ್ಯದ ಮುಖಗಳಂತೆ. ಈ ಹಿನ್ನೆಲೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಭವಿಷ್ಯತ್ತಿನ ಸ್ಪರ್ಧೆಗಳಲ್ಲಿ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ, ಇದೇ ಮೊದಲ ಬಾರಿಗೆ ಯಾದಗಿರಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 1,000 ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ, ಊಟ, ಉಪಹಾರದ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿದ್ದಾರೆ. ಸ್ಪರ್ಧಾಳುಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ ಎಂದು ಹೇಳಿದರು.
ಮಲ್ಲಕಂಬ, ಕರಾಟೆ ಪ್ರದರ್ಶನ, ರೋಪ್ ಮೇಲಿನ ಚಟುವಟಿಕೆ, ಸೇರಿದಂತೆ ವಿವಿಧ ಕಲಾ ಸ್ಪರ್ಧೆಗಳಲ್ಲಿ ಸಂತಸದಿಂದ ಭಾಗವಹಿಸಿರುವುದಕ್ಕೆ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ಕ್ರೀಡಾ ಇಲಾಖೆ ಜಂಟಿ ನಿರ್ದೇಶಕ ಸುಭಾಷ್ ಚಂದ್ರ, ಉಪನಿರ್ದೇಶಕ ಶ್ರೀನಿವಾಸ , ಸಹಾಯಕ ಆಯುಕ್ತ ಶ್ರೀಧರ್ ಗೋಟುರ್, ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.