ನಗರ, ಗ್ರಾಮೀಣ ಪ್ರದೇಶಗಳಿಗೆ ಶುದ್ದ ಕುಡಿಯುವ ನೀರು ಪೂರೈಸಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಸೂಚನೆ

ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಸಭೆ

Update: 2026-08-04 19:02 IST

ಯಾದಗಿರಿ: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಹಾಗೂ ಯಾದಗಿರಿ ತಾಲೂಕುಗಳ ವ್ಯಾಪ್ತಿಯ ಗ್ರಾಮಗಳು ಮತ್ತು ತಾಂಡಾಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಬೋರ್‌ವೆಲ್‌ಗಳ ದುರಸ್ತಿ, ಹೊಸ ಬೋರ್‌ವೆಲ್ ಅಗತ್ಯವಿರುವ ಸ್ಥಳಗಳ ಗುರುತಿಸುವಿಕೆ, ಆರ್‌ಒ ಘಟಕಗಳ ದುರಸ್ತಿ ಹಾಗೂ ಅಗತ್ಯವಿದ್ದಲ್ಲಿ ಖಾಸಗಿ ಬೋರ್‌ವೆಲ್‌ಗಳಿಂದ ನೀರು ಪೂರೈಕೆ ಮಾಡುವಂತಹ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕುಡಿಯುವ ನೀರಿಗಾಗಿ 1 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಗತ್ಯ ಕಾಮಗಾರಿಗಳ ಅಂದಾಜು ವೆಚ್ಚ ಸಿದ್ಧಪಡಿಸಿ ತಕ್ಷಣ ಅನುಷ್ಠಾನಗೊಳಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಪಿಡಿಒಗಳು ಕಡ್ಡಾಯವಾಗಿ ಕಾರ್ಯನಿರ್ವಹಿಸಿ ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಚರಂಡಿಗಳ ಸ್ವಚ್ಛತೆ, ಸೊಳ್ಳೆ ನಿಯಂತ್ರಣ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಾಪಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ 31 ವಾರ್ಡ್‌ಗಳಲ್ಲಿ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುವಂತೆ ನಗರಸಭೆ ಹಾಗೂ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ತಕ್ಷಣ ಮುಚ್ಚಿ, ಮಳೆ ನೀರು ನಿಲ್ಲದಂತೆ ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ ಸೂಗುರ, ಯಾದಗಿರಿ ತಹಸಿಲ್ದಾರ ಸುರೇಶ ಅಂಕಲಗಿ, ವಡಗೇರಾ ತಹಸಿಲ್ದಾರ ಮಂಗಳಾ, ಶಹಾಪುರ ತಾಪಂ ಅಧಿಕಾರಿ ಬಸವರಾಜ ಶರಬೈ, ಯಾದಗಿರಿ ತಾಪಂ ಇಒ ಮಹಾದೇವ, ವಡಗೇರಾ ತಾಪಂ ಅಧಿಕಾರಿ ಶಶಿಧರ ಹಿರೇಮಠ, ಜೆಸ್ಕಾಂ ಎಇಇ ಮಾರ್ಕಂಡೇಶ್ವರ, ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಇತರ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News