ಸುರಪುರ: ಜನರ ಆರೋಗ್ಯ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಸರ್ಕಾರ ಪ್ರತಿಯೊಬ್ಬರ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡುತ್ತದೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂದೆಯವರೂ ಆರೋಗ್ಯ, ಶಿಕ್ಷಣ, ರಸ್ತೆ, ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಕೆಲಸ ಮಾಡಿದ್ದರು. ಅವರ ಹಾದಿಯಲ್ಲಿಯೇ ತಾವು ಕೂಡ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಜನರ ಸಹಕಾರ ನಿರಂತರವಾಗಿ ದೊರೆತರೆ ಕ್ಷೇತ್ರಕ್ಕೆ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ತರಲು ಅನುಕೂಲವಾಗಲಿದೆ. ಹೆಚ್ಚಿನ ಅನುದಾನ ತಂದು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮಾತನಾಡಿ, ಶಾಸಕರ ಕಾಳಜಿಯಿಂದಾಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸಲಾಗಿದೆ. ಇದರಿಂದ ಎರಡು ತಾಲೂಕುಗಳ ವ್ಯಾಪ್ತಿಯ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಸುಮಾರು 12 ಜನರಿಗೆ ವಾರಕ್ಕೆ ಎರಡು ಬಾರಿಯಂತೆ ಡಯಾಲಿಸಿಸ್ ಮಾಡಲಾಗುತ್ತಿದೆ. ತಿಂಗಳಿಗೆ ಒಟ್ಟು 120ಕ್ಕೂ ಹೆಚ್ಚು ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಆಸ್ಪತ್ರೆಯಲ್ಲಿ ಪ್ರತಿ ತಿಂಗಳು 12ರಿಂದ 13 ಸಾವಿರ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 2026ರ ಅಕ್ಟೋಬರ್ 26ರವರೆಗೆ ಒಟ್ಟು 1,14,242 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಪ್ರತಿ ತಿಂಗಳು ಸುಮಾರು 100 ಹೆರಿಗೆಗಳು ನಡೆಯುತ್ತಿವೆ. ಈ ವರ್ಷ 2,896 ತುರ್ತು ಚಿಕಿತ್ಸೆಗಳನ್ನು ನೀಡಲಾಗಿದ್ದು, 6,211 ಎಕ್ಸ್‌ರೇ ಹಾಗೂ 3,254 ಸಿಟಿ ಸ್ಕ್ಯಾನ್‌ಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇಸಿಜಿ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳಿಗೆ ಸಂಬಂಧಿಸಿದ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಅವರಿಗೆ ಪ್ರತಿ ತಿಂಗಳು ಚಿಕಿತ್ಸೆ ಒದಗಿಸಲಾಗುತ್ತಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆರಂಭವಾದರೆ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಆಸ್ಪತ್ರೆಯಲ್ಲಿ ಮೂವರು ಪ್ರಸೂತಿ ತಜ್ಞರು ಸೇರಿದಂತೆ ಒಟ್ಟು 27 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕೃಷಿ ಒಕ್ಕಲುತನ ಹುಟ್ಟುವಳಿ ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ರಾಜಾ ಸಂತೋಷ ನಾಯಕ ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಾಜಾ ಕುಮಾರ ನಾಯಕ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor