×
Ad

ಸುರಪುರ | ದಲಿತರ ಅನುದಾನ ದುರ್ಬಳಕೆ ಖಂಡಿಸಿ ಜು.3ರಂದು ಜನಾಗ್ರಹ ಸಮಾವೇಶ : ಮಾಳಪ್ಪ ಕಿರದಳ್ಳಿ

Update: 2026-06-29 17:38 IST

ಸುರಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಇತರೆ ಯೋಜನೆಗಳಿಗೆ ಬಳಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ತಿಳಿಸಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಸಮಾವೇಶ ಆಯೋಜಿಸಲಾಗಿದ್ದು, ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ 19 ಪ್ರಮುಖ ಬೇಡಿಕೆಗಳನ್ನು ಮುಂದಿರಿಸಲಾಗುವುದು. ರಾಜ್ಯದ ವಿವಿಧ ಭಾಗಗಳಿಂದ ಚಿಂತಕರು, ಹೋರಾಟಗಾರರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದು, ಯಾದಗಿರಿ ಜಿಲ್ಲೆಯಿಂದಲೂ ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಮಲ್ಲಿಕಾರ್ಜುನ ಮುಷ್ಠಳ್ಳಿ, ದಲಿತರ ಅಭಿವೃದ್ಧಿಗಾಗಿ ಮೀಸಲಾದ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸುವುದು ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವಾಗಿದೆ. ದಲಿತರಿಗೆ ಅನ್ಯಾಯವಾದಲ್ಲಿ ಯಾವುದೇ ಸರ್ಕಾರದ ವಿರುದ್ಧವೂ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾವೇಶದ ಭೀತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರ, ಪ್ರಕಾಶ ವಕೀಲ ಮುಷ್ಠಳ್ಳಿ, ಮಲ್ಲಿಕಾರ್ಜುನ ತಳವಾರಗೇರಿ, ಗೊಲ್ಲಾಳಪ್ಪ ಕಟ್ಟಿಮನಿ, ನಿಂಗಪ್ಪ ಮೇಸ್ತ್ರಿ, ಕೆಂಚಪ್ಪ ಕಟ್ಟಿಮನಿ ವಾಗಣಗೇರಿ, ವಿಶ್ವನಾಥ ಹೊಸಮನಿ, ಶ್ರೀಹರಿ ತೇಲ್ಕರ್, ರಾಜು ಭಂಡಾರಿ, ಹೊನ್ನಪ್ಪ ಗೌಂಡಿ ಇದ್ದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇವೆ. ಆದರೆ ನಾವು ಯಾವುದೇ ಪಕ್ಷಕ್ಕೆ ಸೀಮಿತರಾಗಿಲ್ಲ. ದಲಿತರಿಗೆ ಅನ್ಯಾಯವಾದರೆ ಯಾವುದೇ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ.

–ಮಾಳಪ್ಪ ಕಿರದಳ್ಳಿ, ಜಿಲ್ಲಾ ಸಂಚಾಲಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News