ಸುರಪುರ | ಕುಡಿಯುವ ನೀರಿನ ಕುರಿತು ಟಾಸ್ಕ್ ಫೋರ್ಸ್ ಸಭೆ
ಸುರಪುರ: ತಾಲೂಕಿನಾದ್ಯಂತ ಬೇಸಿಗೆ ವೇಳೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಸೂಚಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬೇಸಿಗೆ ಕುಡಿಯುವ ನೀರಿನ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಬೇಸಿಗೆ ಆರಂಭಗೊಂಡಿರುವುದರಿಂದ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಈಗಿನಿಂದಲೇ ಪರಿಶೀಲನೆ ನಡೆಸಬೇಕು. ಬೋರ್‌ವೆಲ್‌ಗಳ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಹಾಗೂ ತೀವ್ರ ಸಮಸ್ಯೆ ಉಂಟಾಗುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಮುಂಚಿತವಾಗಿ ಕ್ರಮ ಕೈಗೊಳ್ಳದೇ ನಂತರ ಸಮಸ್ಯೆ ಕಂಡುಬಂದಲ್ಲಿ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು. ಬೋರ್‌ವೆಲ್ ರಿಫ್ರೆಶಿಂಗ್ ಮಾಡಿಸುವುದು, ನೀರು ಸರಬರಾಜು ಮಾಡುವ ಗುಮ್ಮಿಗಳನ್ನು ಸ್ವಚ್ಛಗೊಳಿಸುವುದು ಹಾಗೂ ನೀರಿನ ಟ್ಯಾಂಕರ್ ಅಥವಾ ಬೋರ್‌ವೆಲ್ ದುರಸ್ತಿ ಅಗತ್ಯವಿದ್ದರೆ ಈಗಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತ್ರಾಯ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಾಗಲೇ ಎಲ್ಲ ರೀತಿಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕಿನಲ್ಲಿ 29 ಗ್ರಾಮಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಬೇಸಿಗೆ ಸಮಯದಲ್ಲಿ ನದಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕರಿಗೆ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಟಪ್ಪ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಮನಗೌಡ ಪಾಟೀಲ, ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಅಭಿಯಂತರ ಶಂಕರಗೌಡ, ನಗರಸಭೆ ಪೌರಾಯುಕ್ತ ಬಸವರಾಜ ಟಣಕೆದಾರ, ಕೆಂಭಾವಿ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಾಶ ಹಾಗೂ ಕಕ್ಕೇರಾ ಪುರಸಭೆಯ ಜೆಇ ರೇಣುಕಮ್ಮ ಸೇರಿದಂತೆ ಅಧಿಕಾರಿಗಳು ಬೇಸಿಗೆ ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ತಹಸಿಲ್ದಾರ್ ಹುಸೇನ ಸಾಬ್ ಎ ಸರಕಾವಸ್, ಹುಣಸಗಿ ತಹಸಿಲ್ದಾರ್ ಬಸವರಾಜ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.