ಸುರಪುರ: ತಾಲೂಕಿನ ಬಂಡೋಳ್ಳಿ ಗ್ರಾಮದ ಬಳಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅಡಿಗಲ್ಲು ಹಾಕಿದರು.

ಈ ಭಾಗದಲ್ಲಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣವಾಗಬೇಕು ಎಂಬುದು ಬಹುದಿನಗಳ ಕನಸಾಗಿತ್ತು. ಮಠದ ನಿರ್ಮಾಣಕ್ಕೆ ಈಗಾಗಲೇ 5 ಕೋಟಿ ರೂ. ಅನುದಾನ ನೀಡಿದ್ದು, ಒಟ್ಟು 25 ಕೋಟಿ ರೂ. ಅನುದಾನ ಒದಗಿಸಲಾಗುವುದು. ಐದು ವರ್ಷಗಳಲ್ಲಿ ಮಠ ಕಾರ್ಯಾರಂಭ ಮಾಡಲಿದೆ ಎಂದು ಸಚಿವರು ಭರವಸೆ ನೀಡಿದರು.

ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಘಟನೆ ಮುಖ್ಯ. ಮೀಸಲಾತಿ ಹೆಚ್ಚಳಕ್ಕೆ ನ್ಯಾಯಾಲಯದ ತಡೆಯಿದ್ದು, ಈ ಕುರಿತು ಪಕ್ಷಾತೀತವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಶೋಷಿತ ಸಮುದಾಯಗಳಿಗೆ ಹಕ್ಕು ಮತ್ತು ಸೌಲಭ್ಯಗಳು ದೊರೆಯುತ್ತಿವೆ ಎಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಮಾತನಾಡಿ, ಮೀಸಲಾತಿ ಹೆಚ್ಚಳಕ್ಕೆ ಇರುವ ನ್ಯಾಯಾಲಯದ ತಡೆಯನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ತಳವಾರ ಮೀಸಲಾತಿ ದುರ್ಬಳಕೆಯಾಗುತ್ತಿರುವ ಬಗ್ಗೆ ಪರಿಶೀಲಿಸಿ, ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ಮಹರ್ಷಿ ವಾಲ್ಮೀಕಿ ಸ್ವಾಭಿಮಾನದ ಪ್ರತೀಕವಾಗಿದ್ದು, ಸಮುದಾಯದ ಅಭಿವೃದ್ಧಿಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಂಸದ ಜಿ. ಕುಮಾರ ನಾಯಕ ಮಾತನಾಡಿ, ಸಮುದಾಯದಲ್ಲಿನ ನಿರುದ್ಯೋಗ, ಬಡತನ ಮತ್ತು ಶಿಕ್ಷಣದ ಕೊರತೆ ನಿವಾರಣೆಗೆ ಸಂಘಟಿತ ಪ್ರಯತ್ನ ಅಗತ್ಯ. ಶೇ.7ರ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಗೆದ್ದಲಮರಿ ಬಳಿ ಕೃಷ್ಣಾ ನದಿಗೆ ಸೇತುವೆ ನಿರ್ಮಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ರಾಜುಗೌಡ ಮಾತನಾಡಿ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಶೇ.7ರ ಮೀಸಲಾತಿ ಜಾರಿಗೆ ಪಕ್ಷಾತೀತ ಹೋರಾಟ ಅಗತ್ಯ ಎಂದು ಹೇಳಿದರು.

ಸಚಿವ ಟಿ. ರಘುಮೂರ್ತಿ ಮಾತನಾಡಿ, ಮೀಸಲಾತಿ ಹೆಚ್ಚಳದ ಸಮಸ್ಯೆ ಪರಿಹಾರಕ್ಕೆ ಕಾನೂನಾತ್ಮಕ ಪ್ರಯತ್ನ ನಡೆಸಲಾಗುವುದು. ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗದಂತೆ ಕ್ರಮ ವಹಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಜಗಳೂರು ಶಾಸಕ ದೇವಿಂದ್ರಪ್ಪ, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಬಿ.ವಿ. ನಾಯಕ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಐದು ಸಾವಿರಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ