ಸುರಪುರ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಬಸವರಾಜ ಸಜ್ಜನ್
ಅರಕೇರಾ (ಕೆ) ಗ್ರಾಮದಲ್ಲಿ ಎಸ್‌ಐಆರ್ ಜಾಗೃತಿ ಜಾಥಾ, ಮೇಣದಬತ್ತಿ ಮೆರವಣಿಗೆ, ಮಾನವ ಸರಪಳಿ
ಸುರಪುರ : ಮತದಾರರ ಪಟ್ಟಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಇರುವುದನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಎಸ್‌ಐಆರ್ ಸ್ವೀಪ್ ಸಮಿತಿ ಅಧ್ಯಕ್ಷ ಬಸವರಾಜ ಸಜ್ಜನ್ ಹೇಳಿದರು.
ತಾಲೂಕಿನ ಅರಕೇರಾ (ಕೆ) ಗ್ರಾಮದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಸ್‌ಐಆರ್ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಉದ್ದೇಶದಿಂದ ಅರಕೇರಾ (ಕೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಣದಬತ್ತಿ ಮೆರವಣಿಗೆ ಹಾಗೂ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಯುವಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಉತ್ಸಾಹದಿಂದ ಭಾಗವಹಿಸಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.
ಬಳಿಕ ಮೇಣದಬತ್ತಿ ಮೆರವಣಿಗೆ ನಡೆಸಿ, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳುವುದು ಹಾಗೂ ಅಗತ್ಯವಿದ್ದರೆ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು, ಪ್ರತಿಯೊಬ್ಬ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.