ಹುಣಸಗಿಯಲ್ಲಿ ಬಸ್ ನಿಲ್ದಾಣ, ಸಾರಿಗೆ ಘಟಕ ನಿರ್ಮಾಣಕ್ಕೆ ಶೀಘ್ರ ಟೆಂಡರ್ : ಸಚಿವ ಭೈರತಿ ಸುರೇಶ್

Update: 2026-08-23 19:13 IST

ಸುರಪುರ: ಹುಣಸಗಿ ಪಟ್ಟಣದಲ್ಲಿ ಬಸ್ ನಿಲ್ದಾಣ ಹಾಗೂ ಸಾರಿಗೆ ಘಟಕ (ಬಸ್ ಡಿಪೋ) ನಿರ್ಮಾಣ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಚಾಲನೆ ನೀಡುವಂತೆ ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಮನವಿ ಮಾಡಿದ್ದಾರೆ.

ಈ ಕುರಿತು ಸಚಿವರಿಗೆ ವಿವರಿಸಿದ ಶಾಸಕರು, ಹುಣಸಗಿ ಪಟ್ಟಣದಲ್ಲಿ ಬಸ್ ಡಿಪೋ ಹಾಗೂ ಬಸ್ ನಿಲ್ದಾಣ ನಿರ್ಮಾಣಕ್ಕೆ ಈ ಹಿಂದೆಯೇ ಅನುಮೋದನೆ ದೊರೆತಿದ್ದರೂ ಇದುವರೆಗೆ ಟೆಂಡರ್ ಪ್ರಕ್ರಿಯೆ ನಡೆದಿಲ್ಲ ಎಂದು ತಿಳಿಸಿದರು. ಹೀಗಾಗಿ ಯಾವುದೇ ವಿಳಂಬ ಮಾಡದೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವ ಭೈರತಿ ಸುರೇಶ್ ಅವರು ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ದೂರವಾಣಿ ಮೂಲಕ ಸೂಚನೆ ನೀಡಿ, ಹುಣಸಗಿ ಪಟ್ಟಣದ ಬಸ್ ಡಿಪೋ ಹಾಗೂ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿಗೆ ಚಾಲನೆ ನೀಡುವಂತೆ ನಿರ್ದೇಶನ ನೀಡಿದ್ದಾರೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ವೆಂಕೋಬ ಯಾದವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News