ವಡಗೇರಾ | ಕೃಷ್ಣವೇಣಿ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಕುಡಿಯುವ ನೀರಿನ ಸಮಸ್ಯೆ : ಮಂಜುನಾಥ ರೆಡ್ಡಿ ಆಕ್ರೋಶ
ವಡಗೇರಾ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಕೃಷ್ಣವೇಣಿ ಸಂಗಮದ ಸಂಗಮೇಶ್ವರ ದೇವಸ್ಥಾನದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಪರದಾಡುವಂತಾಗಿದೆ. ಬೋರ್‌ವೆಲ್ ಮತ್ತು ಕುಡಿಯುವ ನೀರಿನ ಶುದ್ಧೀಕರಣ ಘಟಕ ಕೆಟ್ಟು ಹಲವು ದಿನಗಳು ಕಳೆದಿದ್ದರೂ ದುರಸ್ತಿಗೆ ಕ್ರಮ ಕೈಗೊಳ್ಳದಿರುವುದಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಜಿಲ್ಲಾ ಕಾರ್ಯಾಧ್ಯಕ್ಷ ಮಂಜುನಾಥ ರೆಡ್ಡಿ ಚೆನ್ನೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸಂಗಮೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಸೇರಿದಂತೆ ತೆಲಂಗಾಣ ಮತ್ತು ಆಂಧ್ರಪ್ರದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಅಮಾವಾಸ್ಯೆ ಸೇರಿದಂತೆ ವಿವಿಧ ಧಾರ್ಮಿಕ ದಿನಗಳಲ್ಲಿ ನೂರಾರು ಭಕ್ತರು ಸಂಗಮಕ್ಕೆ ಭೇಟಿ ನೀಡುತ್ತಾರೆ. ಆದರೆ, ಇಲ್ಲಿನ ಕುಡಿಯುವ ನೀರಿನ ಸಮಸ್ಯೆಯಿಂದ ಭಕ್ತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದೇವಸ್ಥಾನದಲ್ಲಿ ಕುಡಿಯುವ ನೀರಿನ ಸೌಲಭ್ಯ ಇಲ್ಲದ ಕಾರಣ ಭಕ್ತರು ನದಿಯ ನೀರನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಕೆಲವರು ಮನೆಯಿಂದಲೇ ಕುಡಿಯುವ ನೀರನ್ನು ತರುವಂತಾಗಿದೆ. ನೀರಿನ ಸಮಸ್ಯೆಯಿಂದ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಕುರಿತು ಗೋನಾಲ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೃಷ್ಣವೇಣಿ ಸಂಗಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಎಂದು ಮಂಜುನಾಥ ರೆಡ್ಡಿ ಒತ್ತಾಯಿಸಿದ್ದಾರೆ.
ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಕೆಟ್ಟು ನಿಂತಿರುವ ಬೋರ್‌ವೆಲ್ ದುರಸ್ತಿಗೊಳಿಸಬೇಕು. ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸರಿಪಡಿಸಿ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.