ಯಾದಗಿರಿ | ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆ
Update: 2026-01-21 20:29 IST
ಯಾದಗಿರಿ : ಜಿಲ್ಲೆಯ ವಡಿಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಬುಧವಾರ ವರದಿಯಾಗಿದೆ.
ಮೃತ ಬಾಲಕನನ್ನು ವಡಿಗೇರಾ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಪವನ್ (14) ಎಂದು ಗುರುತಿಸಲಾಗಿದೆ.
ಈತ ಮಲ್ಲಪ್ಪ ಎಂಬುವವರ ಪುತ್ರನಾಗಿದ್ದು, ಶಾಲಾ ಆವರಣದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪವನ್ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿವೆ.
ವಿಷಯ ತಿಳಿಯುತ್ತಿದ್ದಂತೆಯೇ ವಡಿಗೇರಾ ಪೊಲೀಸ್ ಠಾಣೆಯ ಪಿಎಸ್ಐ ಮೈಬೂಬ್ ಅಲಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವಿದ್ಯಾರ್ಥಿಯ ಈ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.