ಯಾದಗಿರಿ | ಪಂಚ ಗ್ಯಾರಂಟಿ ಮೂಲಕ ಕಾಂಗ್ರೆಸ್ ಜನಮನ ಗೆದ್ದಿದೆ: ಟಿ.ಸುದಾಮ
ಯಾದಗಿರಿ : ಕಾಂಗ್ರೆಸ್ ಪಕ್ಷ ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಜನಾಂಗಗಳ ಪ್ರೀತಿಗೆ ಪಾತ್ರವಾಗಿದೆ. ಕಾಂಗ್ರೆಸ್ ಸರಕಾರ ದುರ್ಬಲರು, ಬಡವರು, ಕಾರ್ಮಿಕರು, ಮಹಿಳೆಯರು ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷರೂ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಟಿ.ಸುದಾಮ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ (ಎಸ್.ಸಿ) ಜಿಲ್ಲಾ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವೇ ನಮಗೆ ಉಸಿರಾಡುವ ಅವಕಾಶ ನೀಡಿದೆ. ಆದ್ದರಿಂದ ಪಕ್ಷವನ್ನು ಬೂತ್ ಮಟ್ಟದಿಂದಲೇ ಬಲಪಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿಸಿಸಿ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ನೀಲಕಂಠ ಬಡಿಗೇರ ಮಾತನಾಡಿ, ಕಾಂಗ್ರೆಸ್ ಪಕ್ಷ ಹಾಗೂ ಸರಕಾರ ಮಾತ್ರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಮತ್ತು ಮುಂದುವರಿದ ಜನಾಂಗಗಳನ್ನು ಸಮಾನವಾಗಿ ನಡೆಸಿಕೊಂಡು ಹೋಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜ್ಯದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.
ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ನೀಲಕಂಠ ಬಡಿಗೇರ, ಹಿರಿಯ ಮುಖಂಡರಾದ ಮಲ್ಲಣ್ಣ ದಾಸನಕೇರಿ, ಜಿಲ್ಲಾ ವಕ್ತಾರ ಹಣಮಂತ ಲಿಂಗೇರಿ, ಕಾಶಪ್ಪ ಚಿನ್ನಾಕಾರ, ಭಾಸ್ಕರ ರಾಮಸಮುದ್ರ, ವಿರುಪಾಕ್ಷಿ ಕೆಂಭಾವಿ, ಮರೆಪ್ಪ ಸುರಪುರ, ದೊಡ್ಡಪ್ಪ ಹುಂಡೇಕಲ್, ಭೀಮರಾಯ ಕಾಂಗ್ರೆಸ್, ಮುಖಂಡರಾದ ಸಾಯಬಣ್ಣ ಕಾವಲಿ, ಚಂದ್ರಕಾಂತ ಮಾಸ್ಟರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.