ಯಾದಗಿರಿ | ಜ.17, 18 ರಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಮಟ್ಟದ ಅಧ್ಯಯನ ಶಿಬಿರ : ಮಾಳಪ್ಪ ಕಿರದಳ್ಳಿ
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಜ.17 ಮತ್ತು 18ರಂದು ಎರಡು ದಿನಗಳ ಕಾಲ ಅಧ್ಯಯನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ಈ ವಿಭಾಗೀಯ ಮಟ್ಟದ ಶಿಬಿರ ಜರುಗಲಿದೆ. ಇದರಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಎರಡು ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ನಾಡಿನ ಅನೇಕ ಪ್ರಖ್ಯಾತ ಚಿಂತಕರು ಮತ್ತು ಸೈದ್ಧಾಂತಿಕ ಹಿರಿಯರು ಪಾಲ್ಗೊಂಡು ವಿವಿಧ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಸಂಘಟನೆಯನ್ನು ಬಲಪಡಿಸುವ ಮತ್ತು ಅಂಬೇಡ್ಕರ್ ವಾದದ ಆಳವಾದ ಅಧ್ಯಯನ ಮಾಡುವ ನಿಟ್ಟಿನಲ್ಲಿ ಈ ಶಿಬಿರ ಮಹತ್ವದ್ದಾಗಿದೆ ಎಂದು ಅವರು ವಿವರಿಸಿದರು.
ಯಾದಗಿರಿ ಜಿಲ್ಲೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಎಲ್ಲಾ ತಾಲೂಕುಗಳ ಸಂಚಾಲಕರು ಮತ್ತು ಸದಸ್ಯರು ಕಡ್ಡಾಯವಾಗಿ ಈ ಅಧ್ಯಯನ ಶಿಬಿರದಲ್ಲಿ ಭಾಗವಹಿಸಬೇಕು ಎಂದು ಮಾಳಪ್ಪ ಕಿರದಳ್ಳಿ ಮನವಿ ಮಾಡಿಕೊಂಡಿದ್ದಾರೆ.