ಯಾದಗಿರಿ | ಸರಕಾರದ ವಿರುದ್ಧ ಮಾತನಾಡುವ ನೈತಿಕತೆ ಎಚ್‌ಡಿಕೆಗಿಲ್ಲ : ಡಾ.ಅಜಯ ಧರ್ಮಸಿಂಗ್
ಯಾದಗಿರಿ, ಜ.24: ರಾಜ್ಯ ಸರಕಾರದ ವಿರುದ್ಧ ಮಾತನಾಡುವ ಯಾವುದೇ ನೈತಿಕ ಹಕ್ಕು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ ಧರ್ಮಸಿಂಗ್ ಟೀಕಿಸಿದ್ದಾರೆ.
ನಗರದದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 12 ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ಸರಕಾರ ರೈತರ ಪರವಾಗಿ ಒಂದೇ ಒಂದು ಪರಿಣಾಮಕಾರಿ ಯೋಜನೆ ಜಾರಿಗೊಳಿಸಿಲ್ಲ. ಬದಲಾಗಿ ಹೋರಾಟ ನಡೆಸಿದ ರೈತರ ಮೇಲೆ ದಬ್ಬಾಳಿಕೆ ನಡೆಸಿದೆ. ಇಂತಹ ಸರಕಾರದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಮೊದಲು ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನಂತರ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲಿ ಎಂದು ಟೀಕಿಸಿದರು.
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ರೈತರ ಪರವಾಗಿ ಸ್ಪಷ್ಟ ನಿಲುವು ತೆಗೆದುಕೊಂಡಿದ್ದಾರೆ. ರೈತರ ಹಿತ ಕಾಯುವ ಪಕ್ಷ ಕಾಂಗ್ರೆಸ್ ಮಾತ್ರ ಎಂಬುದನ್ನು ಕುಮಾರಸ್ವಾಮಿ ಅರಿಯಬೇಕೆಂದರು.
ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ನಡೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದ ಹಿತ ಕಾಯುವ ಬದಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ರಾಜ್ಯಪಾಲರು ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯಪಾಲರು ಸಚಿವ ಸಂಪುಟ ಅಂಗೀಕರಿಸಿದ ನಿರ್ಣಯದಂತೆ ಸಿದ್ಧಪಡಿಸಿದ್ದ ಭಾಷಣವನ್ನು ಓದಲು ನಿರಾಕರಿಸಿದ್ದು, ಕೊನೆಯಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲ ಹುದ್ದೆ ದಯಪಾಲಿಸಿದ್ದರೆಂಬ ಕಾರಣಕ್ಕಾಗಿ ಅವರು ಅಧಿವೇಶನಕ್ಕೆ ಅವಮಾನ ಮಾಡುವ ಮೂಲಕ ಕೇಂದ್ರ ಸರಕಾರದ ಋಣ ತೀರಿಸಿದ್ದಾರೆ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಚ್ಚುವರಿಯಾಗಿ 1,000 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಂಡಳಿಗೆ ಒಟ್ಟು 6,000 ಕೋಟಿ ಅನುದಾನ ಲಭ್ಯವಾಗುವ ನಿರೀಕ್ಷೆ ಇದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ವೇಗ ಸಿಗಲಿದೆ ಎಂದು ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್ ಧರ್ಮಸಿಂಗ್ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಭೀಮರಾಯ ಠಾಣಗುಂದಿ, ರಾಘವೇಂದ್ರ ಹಾಗಣಗೇರಾ ಇತರರು ಉಪಸ್ಥಿತರಿದ್ದರು.