×
Ad

ಯಾದಗಿರಿ | ನೂತನ ನರ್ಸಿಂಗ್ ಕಾಲೇಜು ಕಟ್ಟಡಕ್ಕೆ ಸಚಿವರಿಂದ ಶಂಕುಸ್ಥಾಪನೆ

Update: 2026-03-02 19:50 IST

ಯಾದಗಿರಿ: ರಾಜ್ಯದಲ್ಲಿ ಸ್ಥಾಪಿತವಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜುಗಳನ್ನು ಆರಂಭಿಸುವ ಸದುದ್ದೇಶ ಸರ್ಕಾರ ಹೊಂದಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.

ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವ್ಯಾಪ್ತಿಯಲ್ಲಿ 2025-26ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದಡಿ 9.86 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ನರ್ಸಿಂಗ್ ಕಾಲೇಜು ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಭಾರತ ಸೇರಿದಂತೆ ವಿದೇಶಗಳಲ್ಲಿ ನರ್ಸಿಂಗ್ ಸೇವೆಗೆ ಅಪಾರ ಬೇಡಿಕೆ ಇದೆ. ಜರ್ಮನಿ, ಜಪಾನ್, ಇಟಲಿ ಹಾಗೂ ಆಸ್ಟ್ರೇಲಿಯಾ ದೇಶಗಳಲ್ಲಿ ವಿಶೇಷವಾಗಿ ಹೆಚ್ಚಿನ ಅವಕಾಶಗಳಿದ್ದು, ಭಾಷಾ ಜ್ಞಾನ ಅಗತ್ಯವಾಗಿರುವುದರಿಂದ ಕೆಲ ವೈದ್ಯಕೀಯ ಕಾಲೇಜುಗಳಲ್ಲಿ ಲ್ಯಾಂಗ್ವೇಜ್ ಲ್ಯಾಬ್ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ನರ್ಸಿಂಗ್ ಕಾಲೇಜುಗಳ ಸ್ಥಾಪನೆಯಿಂದ ಉಚಿತ ಸೀಟುಗಳ ಲಾಭ ದೊರೆಯಲಿದೆ. ಇದರಿಂದ ಗ್ರಾಮೀಣ ಹಾಗೂ ಬಡ ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಉದ್ಯೋಗಾವಕಾಶ ಸಿಗಲಿದೆ. ಜೇವರ್ಗಿ ಮತ್ತು ಸೇಡಂಗಳಲ್ಲಿ ಆರಂಭಿಸಿರುವಂತೆ ಯಾದಗಿರಿಯಲ್ಲಿ ಸಹ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗಿದ್ದು, ಬಾಗಲಕೋಟೆ ಹಾಗೂ ರಾಮನಗರದಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಐದು ವರ್ಷಗಳ ಯೋಜನೆಯಡಿ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಹಾಗೂ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಕಲಬುರಗಿ, ಮೈಸೂರು, ಬೆಳಗಾವಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪನೆಯಾಗಿವೆ ಅಥವಾ ಉದ್ಘಾಟನೆ ಹಂತದಲ್ಲಿವೆ. ಯಾದಗಿರಿ, ಕಾರವಾರ ಹಾಗೂ ಗದಗ ಜಿಲ್ಲೆಗಳಲ್ಲೂ ಹಣಕಾಸು ಲಭ್ಯತೆಗೆ ಅನುಗುಣವಾಗಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಜನತೆಗೆ ಉಚಿತ ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಜೊತೆಗೆ ಜಿಲ್ಲೆಗೊಂದು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆಗೂ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಹಾಗೂ ಡೀನ್ ಸಂದೀಪ್ ಹೆಚ್.ವಿ ಪ್ರಾಸ್ತಾವಿಕವಾಗಿ ಮಾತನಾಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್ ಉಪಸ್ಥಿತರಿದ್ದರು, ಉಪಪ್ರಾಂಶುಪಾಲ ಶ್ರೀ ಸಿದ್ದರಾಮಪ್ಪ ಸಜ್ಜನ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News