×
Ad

ಯಾದಗಿರಿ | ಆ.23 ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ : ಡಿಸಿ ಹರ್ಷಲ್ ಭೋಯರ್

ʼʼವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯ ಶೀಘ್ರ ಪೂರ್ಣಗೊಳಿಸಿʼʼ

Update: 2025-09-10 19:03 IST

ಯಾದಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆ.23 ರಿಂದ ಆರಂಭಿಸಿದ್ದು, ವಿದ್ಯುತ್ ಮೀಟರ್ ರೀಡರ್‌ಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಜಿಲ್ಲೆಯಲ್ಲಿ ಆದಷ್ಟು ಬೇಗ ಯಶಸ್ವಿಯಾಗಿ ಈ ಕಾರ್ಯಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಸಿದ ಅವರು, ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು, ವಾಸದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಿ, ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗದಂತೆ ನಿಗಾವಹಿಸಬೇಕು. ಮೀಟರ್ ನಂಬರ್‌ ಇಲ್ಲದ ಅಲೆಮಾರಿ, ಅರೆ ಅಲೆಮಾರಿ ವಾಸಸ್ಥಳ ಮತ್ತು ಕೊಳಚೆ ಪ್ರದೇಶಗಳ, ಅರಣ್ಯ ಪ್ರದೇಶಗಳ ಪ್ರತಿ ಕುಟುಂಬದ ನಂಬರ್ ಆಪಷನ್ ನಲ್ಲಿ UHID ಸೃಜಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಲು ಅವರು ಸೂಚಿಸಿದರು.

ಅದರಂತೆ ಎನ್. ಎಸ್. ಎಸ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕುರಿತು ಸೂಕ್ತ ಅರಿವು ಮೂಡಿಸಬೇಕು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ಈ ಕುರಿತು ಮೇಲುಸ್ತುವಾರಿ ನೋಡಿಕೊಳ್ಳಲು ಹಾಗೂ ಗ್ರಾಮೀಣ ಹಾಗೂ ನಗರ ಸ್ಥಳಗಳಲ್ಲಿ ಕಸ ವಿಲೇವಾರಿ ವಾಹನದ ಮೂಲಕ ಆಡಿಯೋ ಕ್ಲಿಪ್ ಮೂಲಕ ಜಾಗೃತಿ ಮೂಡಿಸಬೇಕು. ಗ್ರಾಮೀಣ ಪ್ರದೇಶದ ಜವಾಬ್ದಾರಿಯನ್ನು ಆಯಾ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿಡಿಒಗಳು ಹಾಗೂ ನಗರ ಪ್ರದೇಶಗಳಲ್ಲಿ ಪಿ.ಡಿ.ಡಿಯುಡಿಸಿ ಅವರು ಜವಾಬ್ದಾರಿ ವಹಿಸಿಕೊಳ್ಳಲು ಅವರು ಸೂಚಿಸಿದರು.

ತಹಶೀಲ್ದಾರ್ ರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಪಿಡಿಡಿಯುಡಿಸಿ ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಗಣತಿದಾರರಿಗೆ ಡಿಡಿಪಿಐ ಮುಖಾಂತರ ಸೂಕ್ತ ತರಬೇತಿ ಹಮ್ಮಿಕೊಳ್ಳಲು ಅವರು ಸೂಚನೆ ನೀಡಿದರು. ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 2 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ ಎಂದರು.

ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗಲು ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಈ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯಬೇಕು. ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಗಳ ಬಗ್ಗೆ ಸಮೀಕ್ಷೆ ಕಾರ್ಯ ಮಹತ್ವದ್ದಾಗಿರುವದರಿಂದ ಕುಟುಂಬಗಳ ಸಮೀಕ್ಷೆ 2024ಕ್ಕೆ ಅನ್ವಯಿಸುವಂತೆ ಜಿಲ್ಲೆಯಲ್ಲಿ 2.80 ಲಕ್ಷ ಕುಟುಂಬಗಳು ಇರುವುದಾಗಿ ಅಂದಾಜಿಸಲಾಗಿದೆ. ಇಂಧನ ಇಲಾಖೆ ಮೀಟರ್ ರೀಡರ್ ಗಳು ಆರ್. ಆರ್ ನಂಬರ್ ಪ್ರಕಾರ ಜಿ.ಓ ಟ್ಯಾಗಿಂಗ್ ಸ್ಟಿಕರ್ ಅಂಟಿಸುವ ಕಾರ್ಯ ಆರಂಭಿಸಿದ್ದು, ಇದಾದ ನಂತರ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲು ಪ್ರತಿ ಕುಟುಂಬಕ್ಕೆ 150 ಕುಟುಂಬಕ್ಕೆ ಒಬ್ಬ ಗಣತಿದಾರರಂತೆ 2000ಕ್ಕೂ ಹೆಚ್ಚು ಗಣತಿದಾರರು ಮತ್ತು ಪ್ರತಿ 20 ಗಣತಿದಾರಿಗೆ ಒಬ್ಬರು ಮೇಲ್ವಿಚಾರಕರನ್ನು ಮತ್ತು ಜಿಲ್ಲೆಗೆ 50 ಮಾಸ್ಟರ್ ಟ್ರೈನರ್ ಗಳನ್ನು ಗುರುತಿಸಿ ನಿಗದಿಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ತರಬೇತಿಗಳಿಗೂ ಸಿದ್ಧತೆ ಮಾಡಿಕೊಳ್ಳಲು ಅವರು ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಡಯಟ್, ಪದವಿಪೂರ್ವ ಕಾಲೇಜು, ಸಿಆರ್ ಪಿ, ಬಿಆರ್ ಪಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜೆಸ್ಕಾಂ, ಇಂಧನ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಈ ಕಾರ್ಯ ಯಶಸ್ವಿಗೊಳಿಸಲು ಅವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ ನಾರಾಯಣಕರ, ವ್ಯವಸ್ಥಾಪಕರಾದ ಸಾಬಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News