ಯಾದಗಿರಿ | ಕ್ರೀಡೆಗಳಿಂದ ಉತ್ತಮ ಆರೋಗ್ಯ ಸಾಧ್ಯ: ಜಿಲ್ಲಾಧಿಕಾರಿ ಹರ್ಷಲ್ ಭೋಯರ್
ಯಾದಗಿರಿ: ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯ ಪಡೆದು ಆರೋಗ್ಯವಂತ ಜೀವನ ನಡೆಸಬೇಕು ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.
ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘ ಹಾಗೂ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಂದಾಯ ಇಲಾಖೆ ನೌಕರರ ಎರಡು ದಿನಗಳ ಕ್ರೀಡಾಕೂಟಕ್ಕೆ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ದಿನನಿತ್ಯದ ಕೆಲಸದ ಒತ್ತಡದ ನಡುವೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬಹುದು. ಕ್ರೀಡೆ ಜೀವನದಲ್ಲಿ ಅಮೂಲ್ಯವಾದ ಪಾತ್ರ ವಹಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಗೆದ್ದೆವು ಎಂದು ಅಹಂಕಾರ ಪಡದೆ, ಸೋತೇವೆ ಎಂದು ಕುಗ್ಗದೆ ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಕ್ರೀಡಾ ವಾಚನ ವಾಚಿಸಿದರು. ಸಹಾಯಕ ಆಯುಕ್ತ ಶ್ರೀಧರ ಗೋಟೂರ, ಯಾದಗಿರಿ ತಹಸಿಲ್ದಾರ್ ಸುರೇಶ ಅಂಕಲಿಗಿ, ಗುರುಮಿಠಕಲ್ ತಹಸೀಲ್ದಾರ್ ಚನ್ನಾಗಿ ಮಲ್ಲಪ್ಪ ಘಂಟಿ, ಶಹಾಪುರ ತಹಸೀಲ್ದಾರ್ ಸಿದ್ಧಾರೂಢ ಬನ್ನಿಕೊಪ್ಪ, ವಡಗೇರಾ ತಹಸೀಲ್ದಾರ್ ಮಂಗಳಾ ಎಮ್, ಸುರಪುರ ತಹಶೀಲ್ದಾರ್ ಹುಸೇನ್ ಸರ್ಕಾವಸ್, ಹುಣಸಿಗಿ ತಹಶೀಲ್ದಾರ್ ಬಸವರಾಜ್, ಕಂದಾಯ ಇಲಾಖೆಯ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ್ ದೇಸಾಯಿ ಗ್ರಾಮ ಆಡಳಿತ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಗಿ ಕ್ರೀಡಾ ವಾಚನವನ್ನು ವಾಚಿಸಿದರು.
ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ಗ್ರೇಡ್ - 2 ಕಂದಾಯ ನೀರಿಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.